ದಾವಣಗೆರೆ: ಸಾಸ್ವೆಹಳ್ಳಿ ಹೋಬಳಿಯ ಕ್ಯಾಸಿನಕೆರೆ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಅಂಗಡಿ ಮಾಲೀಕರೊಬ್ಬರು ಸಜೀವ ದಹನಗೊಂಡು ಮೃತಪಟ್ಟಿದ್ದಾರೆ.
ಮೃತರನ್ನು ಗ್ರಾಮದ ನಿವಾಸಿ ಶಂಕ್ರಯ್ಯ (55) ಎಂದು ಗುರುತಿಸಲಾಗಿದೆ. ಇವರು ಗ್ರಾಮದ ರಸ್ತೆ ಬದಿಯಲ್ಲಿ ಗೂಡಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು.
ಸೋಮವಾರ ಬೆಳಿಗ್ಗೆ ದೀಪಾವಳಿ ಹಬ್ಬದ ಅಂಗವಾಗಿ ತಮ್ಮ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡುತ್ತಿದ್ದ ವೇಳೆ, ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಬಾಟಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದ್ದು, ಅಂಗಡಿಯೊಳಗಿದ್ದ ಶಂಕ್ರಯ್ಯ ಅವರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.






















