ಜಗಳೂರು (ದಾವಣಗೆರೆ): ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಜಗಳೂರು-ಚಿತ್ರದುರ್ಗ ಗಡಿ ಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಪೊಲೀಸ್ ಅಧಿಕಾರಿಯೊಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಡಬನಕಟ್ಟೆ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ.
ಮೃತರನ್ನು ಚಿತ್ರದುರ್ಗ ತಾಲೂಕಿನ ನಂದಿಹಳ್ಳಿ ಗ್ರಾಮದ ನಿವಾಸಿ ರಘುನಾಥ್ ಎಂದು ಗುರುತಿಸಲಾಗಿದೆ. ಅವರು 2007ನೇ ಬ್ಯಾಚ್‌ನ ಅಧಿಕಾರಿಯಾಗಿದ್ದು, ಪ್ರಸ್ತುತ ಕೊಪ್ಪಳ ಜಿಲ್ಲೆಯ ಡಿಸಿಆರ್‌ಇ ಘಟಕದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಅಪಘಾತದ ವಿವರ : ಮೂರು ದಿನಗಳ ರಜೆಯಲ್ಲಿ ಕುಟುಂಬದೊಂದಿಗೆ ಸಮಯ ಕಳೆಯಲು ಬಂದಿದ್ದ ರಘುನಾಥ್, ಪತ್ನಿಯ ತವರೂರಾದ ಆಯಿಕಲ್ ಗ್ರಾಮದಿಂದ ಕೊಪ್ಪಳ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಡಬನಕಟ್ಟೆ ಹತ್ತಿರ ತಾವೇ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ರಘುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಟುಂಬದ ಆಕ್ರಂದನ : ಮೃತ ರಘುನಾಥ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಅವರ ಕುಟುಂಬ ಚಿತ್ರದುರ್ಗದ ಬ್ಯಾಂಕ್ ಕಾಲೋನಿಯಲ್ಲಿ ವಾಸವಾಗಿದ್ದು, ತಾಯಿ ದಾವಣಗೆರೆಯ ಕೆ.ಬಿ. ಬಡಾವಣೆಯಲ್ಲಿ ನೆಲೆಸಿದ್ದಾರೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿ ಆಕ್ರಂದಿಸಿದ್ದು ಮನಕಲಕುವಂತಿತ್ತು.
ಪೊಲೀಸ್ ವಲಯದಲ್ಲಿ ಶೋಕ : ಒಬ್ಬ ನಿಷ್ಠಾವಂತ ಹಾಗೂ ದಕ್ಷ ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಕಂಬನಿ ವ್ಯಕ್ತವಾಗಿದೆ. ಹಲವು ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.























