ದಾವಣಗೆರೆ: ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ತನಿಖೆ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರಿಗೆ ಸೇರಿದ ದಾವಣಗೆರೆಯ ತರಳಬಾಳು ಬಡಾವಣೆಯ ನಿವಾಸದಲ್ಲಿ ಸಿಐಡಿ ಅಧಿಕಾರಿಗಳ ತಂಡ ಶೋಧ ನಡೆಸಿದೆ.
ಸಿಐಡಿ ಅಧಿಕಾರಿಗಳು ಮನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಹಲವು ಮಾಹಿತಿಗಳನ್ನು ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ. ಶಾಂತಾ ಹೊಸಮನಿ ಐದು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಬೆಂಗಳೂರಿಗೆ ವರ್ಗಾವಣೆಯಾದ ನಂತರ ಮನೆಯನ್ನು ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ.
ಕಳೆದ ಎಂಟು ತಿಂಗಳಿಂದ ಮನೆಯಲ್ಲಿ ಯಾರೂ ವಾಸವಿರಲಿಲ್ಲ ಎಂದು ತಿಳಿದು ಬಂದಿದೆ. ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳು ಹಾಗೂ ಇತರ ಮಾಹಿತಿಗಳ ಕುರಿತು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.





















