ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಎಪಿಎಂಸಿ ಅಂಡರ್ ಬ್ರಿಡ್ಜ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಕೆಟಿಜೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಮಂಜುನಾಥ್ (48) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಕುಟುಂಬದ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ದಾದರ್‌ನಿಂದ ಪುದುಚೇರಿಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.






















