SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರರಷ್ಟು ಪತನವಾಗಲಿದೆ

ಕಾಂಗ್ರೆಸ್ ಸರ್ಕಾರ ನೂರಕ್ಕೆ ನೂರರಷ್ಟು ಪತನವಾಗಲಿದೆ

0
60

ದಾವಣಗೆರೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯದಿಂದಾಗಿ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಐದು ವರ್ಷ ಆಡಳಿತ ನಡೆಸುವುದಕ್ಕೆ ತಮ್ಮ ಯಾವುದೇ ತಕರಾರು ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರದೊಳಗಿನ ಆಂತರಿಕ ಕಿತ್ತಾಟ ಹಾಗೂ ಆಡಳಿತ ವೈಫಲ್ಯದಿಂದಾಗಿ ಸರ್ಕಾರ ‘ನೂರಕ್ಕೆ ನೂರರಷ್ಟು ಪತನವಾಗುವುದು ಸೂರ್ಯ-ಚಂದ್ರರಷ್ಟೇ ಸತ್ಯ’ ಎಂದು ಹೇಳಿದ್ದಾರೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಬಲವಾಗುತ್ತಿದೆ ಎಂದು ರೇಣುಕಾಚಾರ್ಯ ಹೇಳಿದರು. ರಾಜ್ಯಾದ್ಯಂತ ನಡೆಯುತ್ತಿರುವ ಪಕ್ಷದ ಪ್ರವಾಸಗಳಿಂದ ಸಂಘಟನೆ ಮತ್ತಷ್ಟು ಗಟ್ಟಿಯಾಗುತ್ತಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ : ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಇದ್ದು, ರೈತರು ಮತ್ತು ಸಾರ್ವಜನಿಕರು ಸಂಕಷ್ಟದಲ್ಲಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ರೇಣುಕಾಚಾರ್ಯ ಆರೋಪಿಸಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸರ್ಕಾರ ಜನವಿರೋಧಿ ಹಾಗೂ ನಿಷ್ಕ್ರಿಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಕೇವಲ ಅಧಿಕಾರಿಗಳ ಸಭೆ ನಡೆಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಸಚಿವರು ಮತ್ತು ಅಧಿಕಾರಿಗಳು ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡಿ ಸ್ಥಳದಲ್ಲೇ ಬರ ಪರಿಸ್ಥಿತಿ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ನಷ್ಟಕ್ಕೊಳಗಾದ ಪ್ರತಿಯೊಬ್ಬ ರೈತನಿಗೂ ಸೂಕ್ತ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತುರ್ತಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.