ದಾವಣಗೆರೆ: ನಗರದ ಜಿಲ್ಲಾ ಆಸ್ಪತ್ರೆಯನ್ನು ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ಧತೆ ನಡೆಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ₹195 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ಅನುಮೋದನೆ ದೊರೆತಿದ್ದು, ಪರಿಶೀಲನಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಶೀಘ್ರದಲ್ಲೇ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕಟ್ಟಡದಲ್ಲಿ ತುರ್ತು ಚಿಕಿತ್ಸಾ ವಿಭಾಗ (ಎಮರ್ಜೆನ್ಸಿ ವಾರ್ಡ್), ತೀವ್ರ ನಿಗಾ ಘಟಕ (ಐಸಿಯು) ಸೇರಿದಂತೆ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಇದರಿಂದ ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒಂದೇ ಸೂರಿನಡಿ ಹೆಚ್ಚಿನ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ, ಎಂಆರ್ಐ ಸೌಲಭ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳು ಸಾಕಾರಗೊಂಡರೆ ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸುಧಾರಿತ ಆರೋಗ್ಯ ಸೇವೆ ದೊರೆಯಲಿದ್ದು, ಸರ್ಕಾರಿ ಆಸ್ಪತ್ರೆಯ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಲಿದೆ ಎಂದರು.
ಒಪ್ಪಂದದಡಿ ಎಂಆರ್ಐ ಸೌಲಭ್ಯ: ಆಸ್ಪತ್ರೆಯಲ್ಲಿ ₹18 ಕೋಟಿ ವೆಚ್ಚದಲ್ಲಿ ಒಪ್ಪಂದದ ಆಧಾರದ ಮೇಲೆ ಎಂಆರ್ಐ (MRI) ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಲು ಮಂಜೂರಾತಿ ದೊರೆತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರು ಹಾಗೂ ಬಡ ರೋಗಿಗಳಿಗೆ ಸರ್ಕಾರದ ಆರೋಗ್ಯ ಯೋಜನೆಗಳಡಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಈ ಸೇವೆ ಲಭ್ಯವಾಗಲಿದೆ. ಇದರಿಂದ ದುಬಾರಿ ವೆಚ್ಚ ಭರಿಸಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದು ತಿಳಿಸಿದರು.
ಶವಾಗಾರ, ಕ್ಯಾಂಟೀನ್ ವ್ಯವಸ್ಥೆ: ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದ್ದು, ಅತ್ಯಾಧುನಿಕ ಶವಾಗಾರ ನಿರ್ಮಾಣ ಹಾಗೂ ರೋಗಿಗಳ ಸಂಬಂಧಿಕರಿಗೆ ಅನುಕೂಲವಾಗುವಂತೆ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಲ್ಲದೆ, ಆಸ್ಪತ್ರೆ ಆವರಣದಲ್ಲಿ ನಡೆಯುವ ಸಣ್ಣಪುಟ್ಟ ಘಟನೆಗಳು ಹಾಗೂ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಪೊಲೀಸ್ ಔಟ್ಪೋಸ್ಟ್ ಸೇವೆಯನ್ನೂ ಒದಗಿಸಲಾಗಿದೆ ಎಂದರು.
ಉಚಿತ ವೈದ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ: ದಾವಣಗೆರೆಯಲ್ಲಿ ಬಡವರು, ಸಾಮಾನ್ಯ ಜನರು ಹಾಗೂ ಆಟೋ ಚಾಲಕರಿಗೆ ಉಚಿತವಾಗಿ ಅಥವಾ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುತ್ತಾ ಜನಮನ್ನಣೆ ಗಳಿಸಿರುವ ‘ಡಬ್ಬಿ ಡಾಕ್ಟರ್’ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಜಿಲ್ಲೆಯ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ. ಜನಪರ ವೈದ್ಯಕೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಪಂ ಸಿಇಒ ಸಾಹಿತ್ಯ ಎಂ.ಆಲದಕಟ್ಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮಹಾನಗರಪಾಲಿಕೆ ಆಯುಕ್ತ ಮಹಾಂತೇಶ್, ದೂಡಾ ಆಯುಕ್ತೆ ರೇಣುಕಾ, ಎಸ್ಪಿ ಡಾ.ಎಚ್.ಟಿ. ಶೇಖರ್, ಎಸಿ ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು.





















