ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯುತಿಗೊಂಡ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ʻ0ʼ ಎಫ್‌ಐಆರ್‌ನ್ನು ಕೃತ್ಯ ನಡೆಸಿದ ಸ್ಥಳದ ವ್ಯಾಪ್ತಿಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ದೂರುದಾರರ ಬಳಿ ಹೇಳಿಕೆ ಪಡೆದುಕೊಂಡಿದ್ದಾರೆ.
ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಮಗನಿಂದ ವಚನಾನಂದ ಸ್ವಾಮೀಜಿ ಮಸಾಜ್ ಮಾಡಿಕೊಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈಗ ಈ ಪ್ರಕರಣ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ತನಿಖೆ ಈಗಾಗಲೇ ಪ್ರಾರಂಭಿಸಲಾಗಿದೆ. ಸಂತ್ರಸ್ತ ಬಾಲಕನ ಹೇಳಿಕೆಯನ್ನು ಪಡೆಯಲಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ಮಾಹಿತಿ ನೀಡಿದ್ದಾರೆ.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್ ವಚನಾನಂದ ಸ್ವಾಮೀಜಿ ಇತ್ತೀಚೆಗೆ ಗುರುಪೀಠದಿಂದ ಪದಚ್ಯುತಿಗೊಳಿಸಲಾಗಿತ್ತು. ಗುರುಪೀಠದಲ್ಲಿದ್ದ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಸ್ವಾಮೀಜಿ ಪದಚ್ಯುತಿಗೊಳಿಸಿದ ಬಳಿಕ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಗುರುಪೀಠಕ್ಕೆ ಭೇಟಿ ನೀಡಿ ವಚನಾನಂದ ಸ್ವಾಮೀಜಿ ಸೇರಿದಂತೆ ಕೆಲವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿತ್ತು.























