SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆಯ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

ದಾವಣಗೆರೆಯ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

0
26

ದಾವಣಗೆರೆ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಇಸ್ಪೀಟ್ ಹಾಗೂ ಮಟ್ಕಾ ಜೂಜಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ, ಒಟ್ಟು 8,280 ರೂ. ನಗದು ವಶಪಡಿಸಿಕೊಂಡಿದ್ದು, 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜಗಳೂರು ತಾಲೂಕಿನ ಹುಚ್ಚಂಗಿಪುರದಿಂದ ದಿದ್ದಿಗೆ ಗ್ರಾಮಕ್ಕೆ ತೆರಳುವ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಬಿಳಿಚೋಡು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 6 ಮಂದಿಯನ್ನು ವಶಕ್ಕೆ ಪಡೆದು, ಅವರಿಂದ 4,800 ರೂ. ನಗದು ವಶಪಡಿಸಿಕೊಂಡರು.

ಅದೇ ರೀತಿ, ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದ ದೇವಾಲಯದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 4 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, 3,000 ರೂ. ನಗದು ಜಪ್ತಿ ಮಾಡಿದರು. ಎರಡೂ ಪ್ರಕರಣಗಳು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಇನ್ನೊಂದೆಡೆ, ಹರಿಹರ ತಾಲೂಕಿನ ಗಂಗನರಸಿ ಗ್ರಾಮದ ಬಸ್ ನಿಲ್ದಾಣದ ಬಳಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, 480 ರೂ. ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಬಾಷಾ ನಗರದಲ್ಲೂ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಆಜಾದ್ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು, ಮಟ್ಕಾ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಕಾನೂನುಬಾಹಿರ ಜೂಜಾಟ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು, ಸಾರ್ವಜನಿಕರು ಇಂತಹ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.