ದಾವಣಗೆರೆ: ಪಂಚರಾಜ್ಯ ಚುನಾವಣೆಯ ರಾಜಕೀಯ ತಾಪಮಾನ ಏರಿಕೆಯಾಗುತ್ತಿರುವ ನಡುವೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ.
ಶನಿವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸೋಲಿನ ಭಯದಿಂದ ಮಮತಾ ಬ್ಯಾನರ್ಜಿ ಅವರು ಸ್ಟ್ರಾಂಗ್ ರೂಮ್‌ಗೆ ನುಗ್ಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದರು. ಈ ರೀತಿಯ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಚುನಾವಣಾ ಪ್ರಕ್ರಿಯೆಯ ಮೇಲಿನ ವಿಶ್ವಾಸದ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಅವರು ಮುಂದುವರೆದು, ದೇಶದಾದ್ಯಂತ ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿ, ಜನರು ಬಿಜೆಪಿ ಪರ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಸಾಧನೆ ಮಾಡಲಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ” ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಸ್ಥಿತಿ ಕುರಿತು ಮಾತನಾಡಿದ ಅವರು, ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ದುರ್ಬಲವಾಗಿದೆ ಎಂದು ಆರೋಪಿಸಿದರು. “ಅಸ್ಸಾಂನಲ್ಲಿ ಕಾಂಗ್ರೆಸ್ ಸುಮಾರು 20 ಸ್ಥಾನಗಳವರೆಗೆ ಸೀಮಿತವಾಗಬಹುದು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಶೂನ್ಯಕ್ಕೆ ಸೀಮಿತವಾಗುವ ಸಾಧ್ಯತೆಯಿದೆ” ಎಂದು ಅಭಿಪ್ರಾಯಪಟ್ಟರು.
ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿದ ಅವರು, AIADMK–ಬಿಜೆಪಿ ಮೈತ್ರಿಗೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಹೇಳಿದರು. “ತಮಿಳುನಾಡಿನಲ್ಲಿ 20-21 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಬಹುದು ಎಂದು ಕೆಲವರು ಹೇಳುತ್ತಿದ್ದರೂ, ಅಂತಿಮವಾಗಿ ಮೈತ್ರಿಗೆ ಲಾಭವಾಗಲಿದೆ” ಎಂದು ಹೇಳಿದರು.
ಕೆರೆಳದಲ್ಲಿಯೂ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದ ಉಪಚುನಾವಣೆಗಳಲ್ಲಿಯೂ ಬಿಜೆಪಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಹೇಳಿದರು.
ಈ ಹೇಳಿಕೆಗಳು ಪಂಚರಾಜ್ಯ ಚುನಾವಣೆಯ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವುಗೊಳಿಸಿದ್ದು, ಫಲಿತಾಂಶದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.






















