ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಹಾಗೂ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದ್ದರೆ, ಅದನ್ನು ದಲಿತ ವಿರೋಧಿ ಹೋರಾಟ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಬೇಡ್ಕರ್ ಅವರ ಆಶಯಗಳಿಗೆ ಹಾಗೂ ಸಂವಿಧಾನಕ್ಕೆ ಸೂಕ್ತ ಗೌರವ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಲಿತರಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮದ ವಿರುದ್ಧ ಬಿಜೆಪಿಯ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಾಗಿದ್ದ ಗಂಗಾ ಕಲ್ಯಾಣ, ಮದುವೆ, ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣದ ದುರುಪಯೋಗದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿದ ರೇಣುಕಾಚಾರ್ಯ, ಮೃತ ಅಧಿಕಾರಿಯ ಕುಟುಂಬಕ್ಕೆ ಸೂಕ್ತ ನ್ಯಾಯ ಹಾಗೂ ಪರಿಹಾರ ದೊರಕಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು. ಪತಿಯನ್ನ ಕಳೆದುಕೊಂಡ ಕುಟುಂಬದ ಕಣ್ಣೀರಿಗೆ ಸರ್ಕಾರ ಉತ್ತರ ನೀಡಬೇಕು. ಆ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ಸರ್ಕಾರದ ಜವಾಬ್ದಾರಿ ಎಂದರು.
ಸಚಿವ ಕೆ.ಎನ್. ರಾಜಣ್ಣ ಅವರ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯದ ಸಂದರ್ಭದಲ್ಲಿ ರಾಜಣ್ಣ ಅವರನ್ನು ನಡೆಸಿಕೊಂಡ ರೀತಿಯೇ ದಲಿತರಿಗೆ ಕಾಂಗ್ರೆಸ್ ನೀಡುತ್ತಿರುವ ಗೌರವಕ್ಕೆ ಸಾಕ್ಷಿ ಎಂದು ಟೀಕಿಸಿದರು. “ದಲಿತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ತನ್ನದೇ ಪಕ್ಷದ ದಲಿತ ನಾಯಕರಿಗೆ ಯಾವ ರೀತಿಯ ಗೌರವ ನೀಡುತ್ತಿದೆ?” ಎಂದು ಪ್ರಶ್ನಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು, ಅವರ ಅಂತ್ಯಸಂಸ್ಕಾರಕ್ಕೆ ಸೂಕ್ತ ಸ್ಥಳ ನೀಡದವರು ಯಾರು ಎಂಬುದನ್ನು ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಾಗ ದಲಿತ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂಬ ಆರೋಪ ಮಾಡುವುದು ಸರಿಯಲ್ಲ ಎಂದು ರೇಣುಕಾಚಾರ್ಯ ಹೇಳಿದರು.
ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯಲಿದ್ದು, ದಲಿತರ ಹಕ್ಕು ಹಾಗೂ ಅಭಿವೃದ್ಧಿಯ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು.




















