ದಾವಣಗೆರೆ: ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸೊಹೇಲ್‌ನನ್ನು ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದಿದ್ದ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು, ಪೊಲೀಸ್ ವಶದ ಅವಧಿ ಪೂರ್ಣಗೊಳ್ಳುವ ಮುನ್ನವೇ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಸೊಹೇಲ್‌ನನ್ನು ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲಾಗಿತ್ತು. ಆರೋಪಿಯು ಬನ್ನಿಕೋಡು ಸಮೀಪದ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಹರಿಹರದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಲಯ ಜೂನ್ 26ರಂದು 10 ದಿನಗಳ ಪೊಲೀಸ್ ವಶಕ್ಕೆ ಅನುಮತಿ ನೀಡಿತ್ತು.
ಪೊಲೀಸ್ ವಶದಲ್ಲಿದ್ದ ಅವಧಿಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳೂ ವಿಚಾರಣೆಯಲ್ಲಿ ಭಾಗವಹಿಸಿ ವಿವಿಧ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಇದೇ ವೇಳೆ ಆರೋಪಿಯ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಪರೀಕ್ಷೆಗಾಗಿ ರವಾನಿಸಲಾಗಿದೆ. ವರದಿ ಬಂದ ಬಳಿಕ ಅಗತ್ಯವಿದ್ದರೆ ಆರೋಪಿಯನ್ನು ಮತ್ತೆ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ತಿಳಿಸಿದ್ದಾರೆ.




















