ದಾವಣಗೆರೆ: ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳು ಕುರಿತು ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಗುರುವಾರ ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್‌ಗಳಾದ ಗುರುಬಸವರಾಜ್, ಪ್ರಭು, ಸರಳ, ಹಾವೇರಿಯ ಕಬ್ಬೂರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಕಚೇರಿಯ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಕೆಲಸ ಮಾಡಿಕೊಡಲು ಅಧಿಕಾರಿಗಳು ಫೋನ್ ಪೇ(ಡಿಜಿಟಲ್ ಲಂಚ) ಮೂಲಕ ಹಣ ಪಡೆಯುತ್ತಿದ್ದಾರೆ. ಪಾಲಿಕೆ ಕಚೇರಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಬಿ-ಖಾತಾ ನೀಡುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮತ್ತು ಹಣಕ್ಕಾಗಿ ಪೀಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಲೋಕಾಯುಕ್ತರಿಗೆ ದೂರುಗಳು ಸಲ್ಲಿಕೆಯಾಗಿದ್ದವು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿ ಕಚೇರಿಯ ಕಂಪ್ಯೂಟರ್‌ಗಳು, ಅರ್ಜಿಗಳ ಫೈಲ್‌ಗಳು ಮತ್ತು ಹಣಕಾಸಿನ ವಹಿವಾಟಿನ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ. ಈ ದಾಳಿಯಿಂದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ. ಸಾರ್ವಜನಿಕರ ದೂರುಗಳ ಅನ್ವಯ ಈ ದಾಳಿ ನಡೆಸಲಾಗಿದ್ದು, ಅಕ್ರಮ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.






















