ದಾವಣಗೆರೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ರಾಜಕೀಯವಾಗಿ ಸೋಲಿಸುವುದೇ ಉದ್ದೇಶವಾಗಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಯಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯನ್ನೂ ಪರಿಗಣಿಸಲಾಗುತ್ತಿದೆ ಎಂದು ನಾರಾಯಣಗುರು ಶಕ್ತಿ ಪೀಠದ ಶ್ರೀಪ್ರಣವಾನಂದ ಸ್ವಾಮೀಜಿ ಸುಳಿವು ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟ ಕೇವಲ ಒಬ್ಬ ವ್ಯಕ್ತಿಯ ವಿರುದ್ಧವಲ್ಲ. ಈಡಿಗ ಸಮುದಾಯದ ಗೌರವ, ಹಕ್ಕು ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ. ಸಮುದಾಯದ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಶಿವಮೊಗ್ಗದಲ್ಲಿ ನಡೆಯಲಿರುವ ಈಡಿಗ ಸಮುದಾಯದ ಕಾರ್ಯಕ್ರಮ, ನಾಳೆ (ಆ. 28) ಬೆಂಗಳೂರಿನಲ್ಲಿ ಸರ್ಕಾರದಿಂದ ನಡೆಯುವ ಬ್ರಹ್ಮಶ್ರೀ ಶ್ರೀನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ನನ್ನನ್ನು ಸೇರಿ ಏಳು ಜನ ಸ್ವಾಮೀಜಿಗಳನ್ನು ಆಹ್ವಾನ ಮಾಡಲಾಗಿತ್ತು. ಆದರೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್, ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ ಏಕೈಕ ಕಾರಣಕ್ಕಾಗಿ ದ್ವೇಷದ ರಾಜಕಾರಣ ಮಾಡಿ ನನ್ನ ಹೆಸರು ತೆಗೆಸಿದ್ದಾರೆ ಎಂದು ದೂರಿದರು.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಎಚ್ಚರಿಕೆ: ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರಣವಾನಂದ ಸ್ವಾಮೀಜಿ, ಈಡಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಹಾಗೂ ಗೌರವ ದೊರೆಯಬೇಕು ಎಂದು ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಭಾಗವಹಿಸುವ ನಾಳೆಯ ಕಾರ್ಯಕ್ರಮದ ಗೌರವಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಮಾರಂಭದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸದಿರಲು ನಿರ್ಧರಿಸಲಾಗಿದೆ. ಆದರೆ ಈಡಿಗ ಸಮುದಾಯವನ್ನು ಕಡೆಗಣಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.
ಈಡಿಗ ಸಮುದಾಯದಿಂದ ಹಲವು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಇದ್ದರೂ ಸಮುದಾಯಕ್ಕೆ ನಿರೀಕ್ಷಿತ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ಈ ವಿಚಾರವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್ ಅವರ ಗಮನಕ್ಕೂ ತರಲಾಗಿದ್ದು, ಅವರು ಸಮುದಾಯದ ಪರವಾಗಿ ಧ್ವನಿ ಎತ್ತಿದ್ದರೂ ಹೈಕಮಾಂಡ್ ಮಟ್ಟದಲ್ಲಿ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.





















