ದಾವಣಗೆರೆ: ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಹಾಗೂ ಸಂದರ್ಶನ ಪ್ರಕಟಿಸಿ ಅವಮಾನಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಲೇಖಕ ರವಿ ಹಂಜ್ ಸೇರಿದಂತೆ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಆಗ್ರಹಿಸಿದರು.
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವಣ್ಣ ಹಾಗೂ ಇತರ ಶರಣರ ವಿರುದ್ಧ ಅವಹೇಳನಕಾರಿ ಹೇಳಿಕೆ ಅಥವಾ ಚಟುವಟಿಕೆಗಳನ್ನು ನಡೆಸಿರುವುದು ಖಂಡನೀಯ. ಇಂತಹ ಕೃತ್ಯ ಎಸಗಿದವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಅವರು ಇಡೀ ಮಾನವ ಕುಲಕ್ಕೆ ಮಾರ್ಗದರ್ಶಕರಾಗಿದ್ದಾರೆ. ಅವರು ಸಾರಿದ ವಚನ ಸಾಹಿತ್ಯ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಆಶಯಗಳು ಸಮಾಜದ ಎಲ್ಲ ವರ್ಗದ ಜನರಿಗೆ ಸೇರಿವೆ. ಇಂತಹ ಮಹಾನ್ ಶರಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.
ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳು ಅಥವಾ ಶಕ್ತಿಗಳಿದ್ದರೂ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲರನ್ನೂ ಕಾನೂನಿನ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದರು.
ಸಮಾಜದಲ್ಲಿ ಅಶಾಂತಿ ಮತ್ತು ಒಡಕು ಮೂಡಿಸುವ ಪ್ರಯತ್ನಗಳನ್ನು ಯಾರೇ ಮಾಡಿದರೂ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸಮಾಜದಲ್ಲಿ ಸಾಮರಸ್ಯ, ಸಹಬಾಳ್ವೆ ಹಾಗೂ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ಜನರನ್ನು ಒಗ್ಗೂಡಿಸಿ ಪರಸ್ಪರ ಗೌರವದಿಂದ ಬದುಕುವಂತೆ ಮಾಡುವ ಕೆಲಸವಾಗಬೇಕೇ ಹೊರತು, ಧಾರ್ಮಿಕ ಹಾಗೂ ಸಾಮಾಜಿಕ ಭಾವನೆಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವ ಪ್ರಯತ್ನಗಳು ನಡೆಯಬಾರದು ಎಂದು ಹೇಳಿದರು.




















