ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಬೇಕಿದೆ. ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿನ ಸಮಸ್ಯೆಗಳೂ ಇನ್ನೂ ಬಗೆಹರಿದಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಭರವಸೆ ಈಡೇರದಿರುವುದು ಬೇಸರ ತಂದಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ಧೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ಆದರೆ, ಪಕ್ಷದೊಳಗಿನ ಗೊಂದಲಗಳನ್ನು ನಿವಾರಿಸಿ ಸಂಘಟನೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮೂವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿದ್ದರೂ, ತಮ್ಮ ಗಮನಕ್ಕೆ ತರದೆ ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದೆ. ಈ ವಿಚಾರವಾಗಿ ತಾವು, ಗೋವಿಂದ ಕಾರಜೋಳ, ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು. 60 ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮಗಳಿಗೆ ಜಿಲ್ಲಾಧ್ಯಕ್ಷರು ಆಹ್ವಾನಿಸಿದರೂ ತಾವು ಹೋಗುತ್ತಿಲ್ಲ. ಜಿಲ್ಲಾ ಬಿಜೆಪಿ ಕಚೇರಿಗೂ ಕಾಲಿಟ್ಟಿಲ್ಲ ಎಂದು ಹೇಳಿರುವ ಅವರು, ಬಿ.ವೈ. ರಾಘವೇಂದ್ರ ಅವರ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ವಿಚಾರ ಚರ್ಚಿಸುವುದಾಗಿ ತಿಳಿಸಿದ್ದಾರೆ.
ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಹರೀಶ್ ದ್ವಿವೇದಿ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ. ಸಾಧ್ಯವಾದರೆ ಅಮಿತ್ ಶಾ ಅವರನ್ನೂ ಭೇಟಿಯಾಗಿ ಚರ್ಚಿಸುವೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಸಮಸ್ಯೆಗಳು ಬಗೆಹರಿಯಬೇಕು. ಪಕ್ಷದ ಕಾರ್ಯಕರ್ತರು ಮತ್ತು ತಮ್ಮ ಬೆಂಬಲಿಗರನ್ನು ಕಡೆಗಣಿಸಿದರೆ ಸಂಘಟನೆಗೆ ಹಿನ್ನಡೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ʻನಮ್ಮ ಜಿಲ್ಲೆಯಲ್ಲಿ ನಾನೇ ಪಕ್ಷ ಕಟ್ಟಿದ್ದೇನೆʼ ಎಂದು ಕೆಲವರು ಹೇಳಿಕೊಳ್ಳುತ್ತಾರೆ. ನಾವೇನು ಪಕ್ಷ ಕಟ್ಟಿಲ್ಲವೇ ಎಂದು ಪ್ರಶ್ನಿಸಿರುವ ಸಿದ್ಧೇಶ್ವರ, ಪರೋಕ್ಷವಾಗಿ ಎಸ್.ಎ. ರವೀಂದ್ರನಾಥ ಹಾಗೂ ಎಂ.ಪಿ. ರೇಣುಕಾಚಾರ್ಯ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.





















