Home ನಮ್ಮ ಜಿಲ್ಲೆ ಧಾರವಾಡ ಹುಬ್ಬಳ್ಳಿ: ಮನೆ ಹಂಚಿಕೆ ತಾರತಮ್ಯ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಮನೆ ಹಂಚಿಕೆ ತಾರತಮ್ಯ ಖಂಡಿಸಿ ಪ್ರತಿಭಟನೆ

0
37

ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ವತಿಯಿಂದ ನಗರದ ಮಂಟೂರ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಮಾಡದೇ, ಮನೆ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಹು-ಧಾ ಪೂರ್ವ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ನಗರದ ದುರ್ಗದ ಬೈಲ್‌ನಲ್ಲಿ ಸಮಾವೇಶಗೊಂಡು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಸ್ಥಳೀಯ ಶಾಸಕ ಪ್ರಸಾದ ಅಬ್ಬಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: “ಲ್ಯಾಂಡ್ ಲಾರ್ಡ್” ದರ್ಶನಕ್ಕೆ ಸಿದ್ದರಾಮಯ್ಯ ಸಿದ್ದ

ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಫಲಾನುಭವಿಗಳೊಂದಿಗೆ ಅಗತ್ಯ ಶಿಷ್ಟಾಚಾರ ಪಾಲನೆ ಮಾಡಲಾಗಿಲ್ಲ. ಅಲ್ಲದೇ ಮನೆ ವಿತರಣೆಯಲ್ಲಿ ಪಕ್ಷಪಾತ ಹಾಗೂ ತಾರತಮ್ಯ ಅನುಸರಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೇಂದ್ರ ಸರ್ಕಾರದ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನು ರಾಜ್ಯ ಸರ್ಕಾರ ತಮ್ಮದೇ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರಿಗೆ ಹೆಚ್ಚಿನ ಮನೆಗಳನ್ನು ವಿತರಿಸಿ, ಹಿಂದು ಸಮುದಾಯದ ವಿರುದ್ಧದ ನೀತಿ ಅನುಸರಿಸಲಾಗುತ್ತಿದೆ. ಇದು ಸಂವಿಧಾನ ವಿರೋಧಿ ಮತ್ತು ಜನ ವಿರೋಧಿ ನಡೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಸರ್ಕಾರದ ಈ ಧೋರಣೆ ಖಂಡನೀಯವಾಗಿದ್ದು, ತಕ್ಷಣವೇ ನ್ಯಾಯಸಮ್ಮತವಾಗಿ ಮನೆ ಹಂಚಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ:  ಕಾರ್ ದಹನ ಪ್ರಕರಣ: ಅಪಘಾತವಲ್ಲ, ಪೂರ್ವನಿಯೋಜಿತ ಕೊಲೆ

ಈ ಪ್ರತಿಭಟನೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ತಿಪ್ಪಣ್ಣ ಮಜ್ಜಗಿ, ಲಿಂಗರಾಜ ಪಾಟೀಲ, ಮಂಜುನಾಥ ಕಾಟಕರ, ನಿಂಗಪ್ಪ ಸುತ್ತಗಟ್ಟಿ, ರಾಜಣ್ಣ ಕೊರವಿ, ರೂಪಾ ಶೆಟ್ಟಿ, ರಂಗಾ ಬದ್ದಿ, ಅನೂಪ ಬಿಜವಾಡ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯ ಸರ್ಕಾರ ಮನೆ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತೋರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು