ಹುಬ್ಬಳ್ಳಿ: ದೇಶದಲ್ಲಿ ಸಕ್ಕರೆ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸಿದ್ದು, ಲಭ್ಯವಿರುವ ಸಕ್ಕರೆ ದಾಸ್ತಾನುಗಳನ್ನು ಶೀಘ್ರ ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ಹಳೆಯ ದರದಲ್ಲಿಯೇ ಸಕ್ಕರೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ದೇಶಕ್ಕೆ ವಾರ್ಷಿಕ ಸುಮಾರು 280 ಲಕ್ಷ ಟನ್ ಸಕ್ಕರೆ ಅಗತ್ಯವಿದೆ. ಪ್ರಸ್ತುತ ಸುಮಾರು 306 ಲಕ್ಷ ಟನ್ ಸಕ್ಕರೆ ದಾಸ್ತಾನು ಇದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ದಾಸ್ತಾನು ಇರುವುದರಿಂದ ಅದನ್ನು ಸಮರ್ಪಕವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಕ್ಕರೆ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಯಾಗಿದೆ ಎಂದು ತಿಳಿಸಿದರು.
ರಾಜ್ಯದ ಮಹಾನಗರ ಪಾಲಿಕೆಗಳಿಗೆ ಸರ್ಕಾರದಿಂದ ಬರಬೇಕಾದ ಅನುದಾನ ಸಮರ್ಪಕವಾಗಿ ಬಿಡುಗಡೆಯಾಗುತ್ತಿಲ್ಲ. ಇದರಿಂದ ಸಿಬ್ಬಂದಿ ವೇತನ, ನೀರು ಸರಬರಾಜು ಸೇರಿದಂತೆ ಮೂಲಸೌಕರ್ಯ ನಿರ್ವಹಣೆಗೆ ತೊಂದರೆಯಾಗುತ್ತಿದೆ. ರಸ್ತೆ, ಬೀದಿ ದೀಪ ಹಾಗೂ ಇತರ ಮೂಲಸೌಕರ್ಯ ಅಭಿವೃದ್ಧಿಗೂ ಅಗತ್ಯ ಹಣದ ಕೊರತೆ ಎದುರಾಗಿದೆ ಎಂದು ದೂರಿದರು.






















