ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಗೋರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಇಂದು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ಮೂಲದವರಾದ ಮೊಹಮ್ಮದ್ ರಫೀಕ್ ಹುಲಗೂರ (45) ಅವರು ಅಪಘಾತದ ನಂತರ ತೀವ್ರ ಸ್ಥಿತಿಯಲ್ಲಿ ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಕುಡಚಿ – ಬಾಗಲಕೋಟೆ ರೈಲು ಮಾರ್ಗ ಹೋರಾಟ ಮತ್ತೇ ಚುರುಕು
ಈ ಕುರಿತು ಮಾಹಿತಿ ನೀಡಿರುವ ಕೆಎಂಸಿ–ಆರ್‌ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ, “ಮೊಹಮ್ಮದ್ ರಫೀಕ್ ಅವರನ್ನು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತದಲ್ಲಿ ಅವರ ಕಾಲು ಹಾಗೂ ಹೊಟ್ಟೆಗೆ ತೀವ್ರ ಪೆಟ್ಟು ಬಿದ್ದಿತ್ತು. ಪರಿಣಾಮವಾಗಿ ಬಹು ಅಂಗಾಂಗ ವೈಫಲ್ಯ ಉಂಟಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.
ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಕ್ಲೀನರ್ ಮೊಹಮ್ಮದ್ ಸಾಧಿಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: Train Fare: ಇಂದಿನಿಂದ ರೈಲು ಪ್ರಯಾಣ ದರ ಏರಿಕೆ
ಈ ಅಪಘಾತದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ರಾಜ್ಯದಾದ್ಯಂತ ತೀವ್ರ ಆಘಾತ ಉಂಟುಮಾಡಿತ್ತು. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ತನಿಖೆ ಮುಂದುವರಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.























