ಕೇಂದ್ರ ಸರ್ಕಾರ ಮಾತು ತಪ್ಪಿದ್ದು, ರಾಜ್ಯದ ಜನತೆಗೆ ವಂಚನೆ ಮಾಡಿವೆ
ಹುಬ್ಬಳ್ಳಿ : “ಕೊಳಗೇರಿ ಜನರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆಗಳನ್ನು ವಿತರಿಸಲಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಉದ್ದೇಶವೇ ಬಡವರನ್ನು ಗೌರವಯುತ ಬದುಕಿನ ಮುಖ್ಯವಾಹಿನಿಗೆ ತರುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ ಬೃಹತ್ ಸಮಾರಂಭದಲ್ಲಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾದ 46,000 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಅವರು ಶುಭ ಹಾರೈಸಿದರು.
ಇದನ್ನೂ ಓದಿ: ಬಿಜೆಪಿಗೆ ಮತ ಹಾಕಿದರೆ ಗುಲಾಮಗಿರಿಗೆ ಬಲಿ : ಖರ್ಗೆ ಎಚ್ಚರಿಕೆ
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ತಮ್ಮ ಮೊದಲ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ನಿರ್ಮಿಸಿ ವಸತಿ ಕ್ರಾಂತಿ ಮಾಡಿ ಇತಿಹಾಸ ನಿರ್ಮಿಸಿತ್ತು ಎಂದು ನೆನಪಿಸಿದರು. ಎರಡನೇ ಬಾರಿ ಮುಖ್ಯಮಂತ್ರಿ ಆದ ನಂತರ, 2024ರಲ್ಲಿ ಮೊದಲ ಹಂತದಲ್ಲಿ 36,789 ಮನೆಗಳನ್ನು ವಿತರಿಸಿದ್ದೇವೆ. ಈಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದು ಹೇಳಿದರು.
“ನಾವು ಹೇಳಿದ್ದನ್ನೆಲ್ಲಾ ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಹೇಳಿದ್ದನ್ನು ಮಾಡದೆ, ನಮ್ಮ ವಿರುದ್ಧ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ” ಎಂದು ಕಿಡಿಕಾರಿದರು.
ಇದನ್ನೂ ಓದಿ: ಕಟೌಟ್ ಕುಸಿತ ಪ್ರಕರಣ: ಗಾಯಾಳು ಯೋಗಕ್ಷೇಮ ವಿಚಾರಿಸಿದ ಸಚಿವ ಜಮೀರ್
ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ: ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿದವರು ಹಾಕಿದ್ರಾ? ಎಂದು ಪ್ರಶ್ನಿಸಿದ ಸಿಎಂ, ಮಹದಾಯಿ, ಕೃಷ್ಣ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿದ್ದು, ರಾಜ್ಯದ ಜನತೆಗೆ ವಂಚನೆ ಮಾಡಿವೆ ಎಂದು ಆರೋಪಿಸಿದರು.
ಈ ಎಲ್ಲಾ ವಿಷಯಗಳ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಿಸಬೇಕು ಎಂದು ಸವಾಲು ಹಾಕಿದರು.
ಇದನ್ನೂ ಓದಿ: ಬಳ್ಳಾರಿ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ: 8 ಯುವಕರು ವಶಕ್ಕೆ, ರೀಲ್ಸ್ ಶಂಕೆ
ಮನೆ ನಿರ್ಮಾಣದಲ್ಲಿ ರಾಜ್ಯದ ಪಾತ್ರ : ಒಂದು ಮನೆಗೆ 4 ರಿಂದ 5 ಲಕ್ಷ ರೂ. ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಕೇಂದ್ರ ಸರ್ಕಾರ ನೀಡುವುದು ಒಂದು ಲಕ್ಷ ರೂ.ಗಿಂತ ಕಡಿಮೆ. ಆದರೆ ಯೋಜನೆಗೆ ಮಾತ್ರ ಪ್ರಧಾನಮಂತ್ರಿ ಆವಾಸ್ ಯೋಜನೆ ಎಂಬ ಹೆಸರು. “ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಇದನ್ನೂ ಓದಿ: ಕಾರ್ ದಹನ ಪ್ರಕರಣ: ಅಪಘಾತವಲ್ಲ, ಪೂರ್ವನಿಯೋಜಿತ ಕೊಲೆ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ವರ್ಷಗಳಲ್ಲಿ ಮನೆ ನಿರ್ಮಾಣಕ್ಕೆ 5,500 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಆರ್ಥಿಕ ಸ್ಥಿತಿ ಕುರಿತು ಸ್ಪಷ್ಟನೆ: ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳ ನಡುವೆಯೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಸಿಎಂ, “ರೈತರ ಪಂಪ್‌ಸೆಟ್‌ಗಳಿಗೆ ಪ್ರತಿ ವರ್ಷ 2,500 ಕೋಟಿ ರೂ. ಸಬ್ಸಿಡಿ ನೀಡುತ್ತಿದ್ದೇವೆ. ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಎಲ್ಲ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: “ಲ್ಯಾಂಡ್ ಲಾರ್ಡ್” ದರ್ಶನಕ್ಕೆ ಸಿದ್ದರಾಮಯ್ಯ ಸಿದ್ದ
ಗಣ್ಯರ ಉಪಸ್ಥಿತಿ: ಈ ಸಮಾರಂಭದಲ್ಲಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವರಾದ ಸತೀಶ ಜಾರಕಿಹೊಳಿ, ಹೆಚ್.ಸಿ. ಮಹದೇವಪ್ಪ, ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಸಂತೋಷ್ ಲಾಡ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರು ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.






















