ಹುಬ್ಬಳ್ಳಿ: ದೇಶದ ಯುವಕರ ಹಿತರಕ್ಷಣೆ ಕಾಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸರಣಿ ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿರುದ್ಯೋಗ ಸಮಸ್ಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಬೃಹತ್ ಹೋರಾಟವನ್ನು ನಡೆಸಲಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಅಭಿಯಾನದ ವಿವರಗಳನ್ನು ನೀಡಿದ್ದು, ಪರೀಕ್ಷಾ ಹಗರಣಗಳು ಮತ್ತು ಉದ್ಯೋಗ ನೇಮಕಾತಿ ವಿಳಂಬದಿಂದ ತೊಂದರೆಗೆ ಒಳಗಾಗಿರುವ ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಹಾಗೂ ಶಿಕ್ಷಕರನ್ನು ಒಂದೇ ವೇದಿಕೆಯಡಿ ತರುವುದು ಈ ಹೋರಾಟದ ಮುಖ್ಯ ಉದ್ದೇಶ ಎಂದು ಹೇಳಿದರು.
ಕೇಂದ್ರ ಶಿಕ್ಷಣ ಸಚಿವರು ಶಿಕ್ಷಣ ಇಲಾಖೆ ನಡೆಸುವಲ್ಲಿ ವಿಫಲರಾಗಿದ್ದು, ಅವರ ರಾಜೀನಾಮೆಗೆ ಸಹ ಒತ್ತಾಯಿಸಿ ಪ್ರತಿಭಟಿಸಲಾಗುವುದು ಎಂದರು.




















