ಹುಬ್ಬಳ್ಳಿ: ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡರೆ ಮುಂದಿನ ಚುನಾವಣೆಯಲ್ಲಿ ಸೋಲು ಖಚಿತ ಎಂಬ ಆತಂಕ ಕಾಂಗ್ರೆಸ್‌ಗೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರು ಚುನಾವಣಾ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೋಗಸ್ ಮತದಾನ ಪ್ರಕ್ರಿಯೆಯನ್ನು ತಡೆಗಟ್ಟಲು ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ನಿರ್ಧಾರವನ್ನು ಸಂಪೂರ್ಣವಾಗಿ ಸ್ವಾಗತಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರು ಹಾಗೂ ರೋಹಿಂಗ್ಯಾಗಳು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದು, ನಕಲಿ ಮತದಾನ ತಡೆಯಲು ಎಸ್‌ಐಆರ್ ಪ್ರಕ್ರಿಯೆ ಅತ್ಯಗತ್ಯವಾಗಿದೆ. ಅಲ್ಪಸಂಖ್ಯಾತರ ಪಟ್ಟಿಯಲ್ಲಿ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳನ್ನು ಮತದಾರರನ್ನಾಗಿ ಸೇರಿಸಲಾಗಿದೆ. ಹಲವು ಬೂತ್‌ಗಳಲ್ಲಿ ಒಬ್ಬರೇ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಗಳಿವೆ. ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕದೆ ಬೋಗಸ್ ಮತದಾನ ನಡೆಯುತ್ತಿತ್ತು ಅದನ್ನು ತಪ್ಪಿಸಲು ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.
ಮತದಾರರ ಗುರುತಿನ ಚೀಟಿಯಲ್ಲಿ ಬುರ್ಕಾ ಧರಿಸಿರುವ ಫೋಟೋಗಳ ಬದಲಿಗೆ, ಸ್ಪಷ್ಟವಾಗಿ ಗುರುತಿಸಬಹುದಾದ ಮುಖದ ಫೋಟೋಗಳನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.






















