ಧಾರವಾಡ: ರಾಜ್ಯದ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಮತ್ತು ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ. 17ರಂದು ಧಾರವಾಡದಲ್ಲಿ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ, ಹಿರಿಯ ನೇತಾರ ಬಸವರಾಜ ಹೊರಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಹೋರಾಟ ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಹೋರಾಟ ಆರಂಭವಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳು, ಮುಖ್ಯಸ್ಥರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11.30ಕ್ಕೆ ಧಾರವಾಡದ ಕಡಪಾ ಮೈದಾನದಲ್ಲಿ ಸಮಾವೇಶಗೊಳ್ಳಲಿರುವ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ನೌಕರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದರೂ ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಶಿಕ್ಷಣ ಸಂಸ್ಥೆಗಳ ಅಸ್ತಿತ್ವ, ಆಡಳಿತಾತ್ಮಕ ನಿರ್ವಹಣೆ, ಶೈಕ್ಷಣಿಕ ಚಟುವಟಿಕೆಗಳು ಹಾಗೂ ನೌಕರರ ಸೇವಾ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
17 ಬೇಡಿಕೆಗಳ ಈಡೇರಿಕೆಗೆ ಆಗ್ರಹ: 2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಮಾನ್ಯತೆ ಮತ್ತು ಅನುದಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವುದು, 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನದ ವ್ಯಾಪ್ತಿಗೆ ಒಳಪಡಿಸುವುದು ಪ್ರಮುಖ ಬೇಡಿಕೆಗಳಾಗಿವೆ.
ಅಲ್ಲದೆ, ಅನುದಾನಿತ ಶಾಲೆಗಳಲ್ಲಿ 2015ರಿಂದ ಖಾಲಿ ಇರುವ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳ ಭರ್ತಿಗೆ ಅನುಮತಿ ನೀಡುವುದು, ದ್ವಿಭಾಷಾ ಶಿಕ್ಷಣ ಪದ್ಧತಿಯನ್ನು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೂ ವಿಸ್ತರಿಸುವುದು ಸೇರಿದಂತೆ ಒಟ್ಟು 17 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು.
ನ. 18ರಿಂದ ಶಾಲಾ-ಕಾಲೇಜು ಬಂದ್: ನ. 17ರಂದು ನಡೆಯಲಿರುವ ಹೋರಾಟದ ಬಳಿಕವೂ ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳದಿದ್ದರೆ, ನ. 18ರಿಂದ ರಾಜ್ಯದ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪರವಾಗಿ ಜಿ.ಆರ್. ಭಟ್ ತಿಳಿಸಿದ್ದಾರೆ.





















