ಜಯನಗರ ವೃತ್ತದಲ್ಲಿ ಉದ್ವಿಗ್ನತೆ, ಪೊಲೀಸ್ ಆಯುಕ್ತರಿಗೆ ಘೇರಾವ್
ಧಾರವಾಡ: ಖಾಲಿ ಹುದ್ದೆಗಳ ಭರ್ತಿ ಹಾಗೂ ನೇಮಕಾತಿ ಪ್ರಕ್ರಿಯೆ ವೇಗಗೊಳಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ಗಂಟೆಯಿಂದ ಗಂಟೆಗೆ ತೀವ್ರತೆ ಪಡೆಯುತ್ತಿದೆ. ನಗರದ ಜಯನಗರ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಮತ್ತು ಯುವಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರ ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದರು. ಸರ್ಕಾರವು ಉದ್ಯೋಗ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ತಕ್ಷಣ ಸ್ಪಷ್ಟ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ರಣಜಿ ಫೈನಲ್: ಜಮ್ಮು–ಕಾಶ್ಮೀರಕ್ಕೆ ಆರಂಭಿಕ ಆಘಾತ
ಕಮಿಷನರ್‌ಗೆ ಘೇರಾವ್: ಪ್ರತಿಭಟನೆ ವೇಳೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮುಂದೆ ಸಾಗುತ್ತಿದ್ದಾಗ, ಭುಗಿಲೆದ್ದ ವಿದ್ಯಾರ್ಥಿಗಳು ಆಯುಕ್ತರನ್ನೇ ಕೆಲಕಾಲ ಘೇರಾವ್ ಹಾಕಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕೆಲ ಪ್ರಮುಖ ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಜಿಲ್ಲಾಡಳಿತವು ಪ್ರತಿಭಟನಾಕಾರರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಬೇಡಿಕೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿಭಟನಾಕಾರರು ಭರವಸೆ ಸಿಗುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಧಾರವಾಡದಲ್ಲಿ ತೀವ್ರ ಸ್ವರೂಪ ಪಡೆದ ಉದ್ಯೋಗಾಕಾಂಕ್ಷಿಗಳ ಹೋರಾಟ
ನಗರದ ಪ್ರಮುಖ ವೃತ್ತಗಳು ಹಾಗೂ ಸರ್ಕಾರಿ ಕಚೇರಿಗಳ ಬಳಿ ಭದ್ರತೆ ಕಠಿಣಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ತೀವ್ರ ನಿಗಾವಹಿಸಿದ್ದಾರೆ.





















