ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: NCW ಸ್ವಯಂ ಪ್ರೇರಿತ ದೂರು ದಾಖಲಿಸಿ ತೀವ್ರ ಆಕ್ಷೇಪ

0
5

ನವದೆಹಲಿ: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

ಆಯೋಗದ ಪ್ರಕಟಣೆಯ ಪ್ರಕಾರ, ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಈ ಪ್ರಕರಣವು ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಗಂಭೀರವಾದ ದಾಳಿ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಮಗನ ಸಾವಿನ ಮಧ್ಯೆಯೂ ಮಾನವೀಯತೆ: ಅನಿಲ್ ಅಗರ್ವಾಲ್ ಶೇ. 75ಕ್ಕೂ ಹೆಚ್ಚು ಆಸ್ತಿ ದಾನ ಮಾಡಲು ಶಪಥ

“ಮಹಿಳೆಯ ಘನತೆಗೆ ಧಕ್ಕೆ” – ಆಯೋಗದ ಅಧ್ಯಕ್ಷೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, “ಇಂತಹ ಘಟನೆಗಳು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಲಿಂಗಾಧಾರಿತ ಹಿಂಸೆಯಿಂದ ರಕ್ಷಿಸುವ ಮೂಲಭೂತ ಹಕ್ಕುಗಳ ಉಲ್ಲಂಘನೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಡಿಜಿಪಿಗೆ ಪತ್ರ: ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಗವು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದು, ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರದಿದ್ದಲ್ಲಿ ಕೂಡಲೇ ದಾಖಲಿಸಬೇಕು. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆ ನಡೆಸಬೇಕು. ದುಷ್ಕೃತ್ಯ ನಡೆದಿರುವುದು ಸಾಬೀತಾದಲ್ಲಿ, ಸಂಬಂಧಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಹಾಗೂ ಕಾನೂನಿನ ಪ್ರಕಾರ ಪರಿಹಾರ ದೊರಕುವಂತೆ ಖಚಿತಪಡಿಸಬೇಕು ಎಂದು ತಿಳಿಸಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟದ ಧ್ವನಿ ಮೌನ: ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಐದು ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ: ಪ್ರಕರಣದ ಕುರಿತು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಐದು ದಿನಗಳೊಳಗೆ ವಿವರವಾದ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.

ಸಾರ್ವಜನಿಕ ವಲಯದಲ್ಲಿ ಆಕ್ರೋಶ: ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳಾ ಸಂಘಟನೆಗಳು ಮತ್ತು ಹಕ್ಕು ಹೋರಾಟಗಾರರು ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ತಲ್ಲಣಿಸಿದ ಸಹ್ಯಾದ್ರಿ ಕೊಳ್ಳದ ನಡುವೆ ಸಂತ-ಜನ…!

ರಾಷ್ಟ್ರೀಯ ಮಹಿಳಾ ಆಯೋಗದ ಹಸ್ತಕ್ಷೇಪದಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

Previous articleಮಗನ ಸಾವಿನ ಮಧ್ಯೆಯೂ ಮಾನವೀಯತೆ: ಅನಿಲ್ ಅಗರ್ವಾಲ್ ಶೇ. 75ಕ್ಕೂ ಹೆಚ್ಚು ಆಸ್ತಿ ದಾನ ಮಾಡಲು ಶಪಥ