ಧಾರವಾಡ: ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಆಂತರಿಕ ಬಂಡಾಯವನ್ನು ತಪ್ಪಿಸಲು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಎಸ್‌ಐಆರ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮಾಡುತ್ತಿರುವ ಎಲ್ಲ ತಪ್ಪುಗಳನ್ನು ಮುಚ್ಚಿಹಾಕಲು ಈ ಎಲ್ಲ ನಾಟಕಗಳನ್ನು ಮಾಡುತ್ತಿದ್ದಾರೆ. ಇದು ಕೆಲಸ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಧಾರವಾಡದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾಣೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಆಕಾಶವಾಣಿ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಅವರು ಕಳೆದ 15 ವರ್ಷಗಳಿಂದ ಮಾಡುತ್ತಿರುವ ಎಲ್ಲ ತಪ್ಪುಗಳನ್ನು ಮುಚ್ಚಿಹಾಕಲು ಬಯಸುತ್ತಿದ್ದಾರೆ.
ಅವರು ಇದನ್ನು ಮಾಡದಿದ್ದರೆ, ಪಕ್ಷದೊಳಗೆ ಆಂತರಿಕ ಬಂಡಾಯ ಎದುರಾಗುತ್ತದೆ. ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಆಂತರಿಕ ಬಂಡಾಯವನ್ನು ತಪ್ಪಿಸಲು, ಅವರು ಈ ಎಲ್ಲ ನಾಟಕಗಳನ್ನು ಮಾಡುತ್ತಿದ್ದಾರೆ. ಅಂತಿಮವಾಗಿ ಇದು ಕೆಲಸ ಮಾಡುವುದಿಲ್ಲ. ಇದು ಕಾಂಗ್ರೆಸ್‌ಗೆ ಪ್ರಯೋಜನಕ್ಕೆ ಬರುವುದಿಲ್ಲ. ಸತ್ಯವೇ ಗೆಲ್ಲುತ್ತದೆ ಮತ್ತು ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.






















