SK Home Ad
Home ನಮ್ಮ ಜಿಲ್ಲೆ ಧಾರವಾಡ ಧಾರವಾಡದಲ್ಲಿ ಮತ್ತೆ ಪ್ರತಿಭಟನೆಗೆ ಸಜ್ಜಾದ ವಿದ್ಯಾರ್ಥಿಗಳು

ಧಾರವಾಡದಲ್ಲಿ ಮತ್ತೆ ಪ್ರತಿಭಟನೆಗೆ ಸಜ್ಜಾದ ವಿದ್ಯಾರ್ಥಿಗಳು

0
34

ಧಾರವಾಡ: ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ, ಪರೀಕ್ಷಾ ಅಕ್ರಮ ಹಾಗೂ ಲೋಪದೋಷಗಳನ್ನು ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 18ರಂದು ಧಾರವಾಡದ ಮಿಚಿಗನ್ ಕಾಂಪೌಂಡ್ ಮೈದಾನದಲ್ಲಿ ಅನಿರ್ದಿಷ್ಟಾವಧಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಕೇಳಲಾಗಿದೆ. ಆದರೆ, ಪೊಲೀಸ್ ಆಯುಕ್ತರು ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳು ಸಿದ್ಧರಾಗಿದ್ದಾರೆ. ಪೊಲೀಸ್ ಇಲಾಖೆ ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸುವವರು ಇಲ್ಲಿ ಸತ್ಯಾಗ್ರಹ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪದೋಷಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸಿ, ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆಗಳ ನೇಮಕಾತಿ ಪ್ರಕ್ರಿಯೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ತರಬೇತಿ ಕೇಂದ್ರಗಳನ್ನು ಆರಂಭಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಕೆಲವು ಹುದ್ದೆಗಳ ಭರ್ತಿಗೆ ಮಾತ್ರ ಮುಂದಾಗಿದ್ದು, ವಿದ್ಯಾರ್ಥಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಹಿಂದೇಟು ಹಾಕುತ್ತಿದೆ. ನಿರುದ್ಯೋಗಿ ಯುವಜನರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಎಲ್ಲ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.