SK Home Ad
Home ನಮ್ಮ ಜಿಲ್ಲೆ ಧಾರವಾಡ ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ವ್ಯಾಪ್ತಿಗೆ ಬರಲ್ಲ

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ವ್ಯಾಪ್ತಿಗೆ ಬರಲ್ಲ

0
48

ಹುಬ್ಬಳ್ಳಿ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ಪೌರತ್ವ, ನಿವಾಸ ಸೇರಿದಂತೆ ಇಂತಹ ವಿಷಯಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿವೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯನ್ನೂ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೇ ಇದೆ. ಈ ಹಿಂದೆ ರಾಜ್ಯ ಸರ್ಕಾರಗಳು ಜಾತಿ ಸಮೀಕ್ಷೆ ನಡೆಸಿದ್ದರೂ ಅದಕ್ಕೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅದೇ ರೀತಿ ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದೂ ಕಾನೂನು ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದರೆ ಅಂತಹ ಆದೇಶ ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿಚಾರದಲ್ಲಿ ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಯೇ ಸಮಸ್ಯೆಗೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸೆಗೆ ಅವಕಾಶ ನೀಡಿದ ಪರಿಣಾಮ ಅನೇಕರು ದೇಶದೊಳಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ವಲಸಿಗರು ಇದ್ದರೆ ಅದನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವುದು ರಾಜ್ಯದ ಗೃಹ ಇಲಾಖೆಯ ಜವಾಬ್ದಾರಿಯಾಗಿದೆ. ರಾಜ್ಯ ಗೃಹ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸದ ಕಾರಣ ಇಂತಹ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದರು.

ಮತಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಪ್ರಯತ್ನ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು, “ಬಾಂಗ್ಲಾದೇಶಿ ನಾಗರಿಕರಿಗೆ ಪೌರತ್ವ ನೀಡಿಲ್ಲ” ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಮೌಖಿಕ ಹೇಳಿಕೆ ನೀಡುವುದರಿಂದ ಸಾಲದು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರ ಗೃಹ ಸಚಿವರಿಗೆ ಅಧಿಕೃತ ಪತ್ರ ಬರೆದು ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಲಿಖಿತ ರೂಪದಲ್ಲಿ ತಿಳಿಸಿದರೆ ಮಾತ್ರ ಅದನ್ನು ನಂಬಲು ಸಾಧ್ಯ ಎಂದು ಹೇಳಿದರು.