SK Home Ad
Home ನಮ್ಮ ಜಿಲ್ಲೆ ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

0
271

ನವದೆಹಲಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಸಚಿವರು, ಅಮಾಯಕ ವಿದ್ಯಾರ್ಥಿಯನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಹಾಗೂ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥ ಪೊಲೀಸ್ ಇನ್ಸಪೆಕ್ಟರ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ರಾಜ್ಯ ಸರ್ಕಾರ ಇಡೀ ಪ್ರಕರಣದ ನೈತಿಕ ಹೊಣೆ ಹೊರಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.