SK Home Ad
Home ನಮ್ಮ ಜಿಲ್ಲೆ ಗದಗ ಗದಗ: RDPR ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಗದಗ: RDPR ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

0
115

ಗದಗ: ನಗರದ ಹೊರವಲಯದಲ್ಲಿರುವ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾರ್ವಜನಿಕ ಆರೋಗ್ಯ (MPH) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ವೀಣಾ ಹಾನಾಪುರ ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಲಭ್ಯ ಮಾಹಿತಿಯ ಪ್ರಕಾರ, ವೀಣಾ ಹಾನಾಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ಗೃಹದಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಸುಮಾರು 8.30 ಗಂಟೆ ವೇಳೆಗೆ ತಮ್ಮ ಕೊಠಡಿಗೆ ತೆರಳಿದ್ದರು. ಆದರೆ ರಾತ್ರಿ 11 ಗಂಟೆಯಾದರೂ ಕೊಠಡಿಯಿಂದ ಹೊರಬರದೇ ಇರುವುದು ಹಾಗೂ ಊಟಕ್ಕೂ ಹಾಜರಾಗದಿರುವುದು ಸಹಪಾಠಿಗಳ ಗಮನಕ್ಕೆ ಬಂದಿದೆ.

ಇದನ್ನೂ ಓದಿ: ʼದೆಹಲಿ ಪ್ರತಿಭಟನೆ: ವಿವಿ ಸೂಚನೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಇದರಿಂದ ಅನುಮಾನಗೊಂಡ ವಿದ್ಯಾರ್ಥಿನಿಯರು ತಕ್ಷಣವೇ ವಸತಿ ನಿಲಯದ ವಾರ್ಡನ್ ಹಾಗೂ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಗಳು, ವಾರ್ಡನ್ ಹಾಗೂ ಇತರ ವಿದ್ಯಾರ್ಥಿನಿಯರ ಸಮ್ಮುಖದಲ್ಲಿ ಕೊಠಡಿಯ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ವಿದ್ಯಾರ್ಥಿನಿ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ವಿದ್ಯಾರ್ಥಿನಿಯನ್ನು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಆಸ್ಪತ್ರೆಗೆ ಸಾಗಿಸಲಾಯಿತು.

ಇದನ್ನೂ ಓದಿ: ಪರೀಕ್ಷಾ ಅಕ್ರಮಕ್ಕೆ ತಡೆ: ಸಂಪುಟ ಸಭೆಯಲ್ಲಿ ಇಂದು ಪ್ರಮುಖ ನಿರ್ಧಾರ

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಅಧಿಕೃತವಾಗಿ ದೃಢಪಡಿಸಿದ್ದಾರೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿನಿ ಯಾವುದೇ ಆತ್ಮಹತ್ಯೆ ಪತ್ರ (Suicide Note) ಬರೆದಿದ್ದಾರೆಯೇ ಅಥವಾ ಇತರ ಯಾವುದೇ ಕಾರಣಗಳಿವೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಮನ್ ಕಿ ಬಾತ್’ ಬಿಟ್ಟು ಸಂಸತ್ತಿನಲ್ಲಿ ಚರ್ಚಿಸಿ: ಪ್ರಧಾನಿಗೆ ಖರ್ಗೆ ಪಟ್ಟು!

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮೃತ ವಿದ್ಯಾರ್ಥಿನಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಸೂಚನೆ: ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವವರು ಸಹಾಯ ಪಡೆಯುವುದು ಅತ್ಯಂತ ಅಗತ್ಯ. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ಅಗತ್ಯವಿದ್ದಲ್ಲಿ ಸ್ಥಳೀಯ ಸಹಾಯವಾಣಿ ಅಥವಾ ವಿಶ್ವಾಸಾರ್ಹ ವ್ಯಕ್ತಿಗಳ ನೆರವು ಪಡೆಯಲು ಮನವಿ.