ಬೇಲೂರು: ಕಳೆದ ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಎರಡು ಕಿಲ್ಲರ್ ಪುಂಡಾನೆಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ಉದೇವಾರ ಎಸ್ಟೇಟ್ನಲ್ಲಿ ಗುರುವಾರ ನಡೆದ ಮೂರನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಎರಡು ಪುಂಡಾನೆಗಳನ್ನು ಅರವಳಿಕೆ ಮದ್ದು ನೀಡಿ ಕೆಡ್ಡಾಕ್ಕೆ ಕೆಡವಲಾಗಿದೆ.
ಕ್ಯಾಪ್ಟನ್ ಪ್ರಶಾಂತ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಏಳು ಕುಮ್ಕಿ ಸಾಕಾನೆಗಳನ್ನು ಬಳಸಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಪುಂಡಾನೆಗಳನ್ನು ಪತ್ತೆಹಚ್ಚಿ, ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಸೆರೆ ಕಾರ್ಯಾಚರಣೆ ನಡೆಯುತ್ತಿದ್ದು, ಮೊದಲ ಎರಡು ದಿನಗಳ ಕಾರ್ಯಾಚರಣೆಯಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿರಲಿಲ್ಲ. ಇದೀಗ ಮೂರನೇ ದಿನದ ಕಾರ್ಯಾಚರಣೆಯಲ್ಲಿ ಎರಡು ಪುಂಡಾನೆಗಳು ಸೆರೆ ಸಿಕ್ಕಿರುವುದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರಲ್ಲಿ ಸಮಾಧಾನ ಮೂಡಿಸಿದೆ.






















