ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಜಿಲ್ಲೆಗಳಿಂದ ಪರಿಶೀಲನಾ ವರದಿಗಳು ಬಂದ ಬಳಿಕ ಅಗತ್ಯ ಕಂಡುಬಂದರೆ ಬರಗಾಲ ಘೋಷಣೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರೈತರು ಮಳೆ ಕೊರತೆಯಿಂದ ನಷ್ಟ ಅನುಭವಿಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಆಧರಿಸಿ ರೈತರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಸವಣೂರು ಏತ ನೀರಾವರಿ ಯೋಜನೆ ಮರುಚಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಇನ್ನೂ ಹಲವು ಕಡೆ ಪೂರ್ಣಗೊಂಡಿಲ್ಲ. ಸಂಪೂರ್ಣ ಮುಗಿದಿರುವ ಯೋಜನೆಗಳನ್ನು ಮಾತ್ರ ಇಲಾಖೆ ಹಸ್ತಾಂತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿರುವ ಅನೇಕ ಪ್ರವಾಸಿ ಮಂದಿರಗಳು ಮುಚ್ಚಿರುವುದು ಗಮನಕ್ಕೆ ಬಂದಿದೆ. ಪ್ರತಿ ಐಬಿಗೆ 3ರಿಂದ 5 ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿ ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದರು.






















