ಬೆಂಗಳೂರು: ಕರ್ನಾಟಕದಲ್ಲಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಗಾಳಿ, ಮಳೆಗೆ ಜನರು ಹೈರಾಣಾಗಿದ್ದಾರೆ. ಹಳ್ಳ, ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಮಳೆ ಹಿನ್ನಲೆಯಲ್ಲಿ ಸೋಮವಾರ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‌ಎನ್‌ಎಂಡಿಸಿ) ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಆಗಸ್ಟ್ 15ರ ಬಳಿಕ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಹಾಗೆಯೇ ಮಳೆ ಅಬ್ಬರಿಸುತ್ತಿದೆ.
ಕೆಎಸ್‌ಎನ್‌ಎಂಡಿಸಿ ಮುಂದಿನ 7 ದಿನಗಳ ಮಳೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಆಗಸ್ಟ್ 20 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆ, ಹಾಗೂ ಅಲ್ಲಲ್ಲಿ ಅತಿ ಭಾರೀ ಮಳೆಯಾಗಲಿದೆ. ಸೋಮವಾರ ಅಲ್ಲಲ್ಲಿ ಅತ್ಯಅಧಿಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಚದುರಿದಿಂತೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಸೋಮವಾರ ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭದ್ರಾ ಡ್ಯಾಂ ಮತ್ತು ವರದಾ ನದಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಡ್ಯಾಂ ನಿಂದ 1 ಲಕ್ಷ 10 ಸಾವಿರಕ್ಕಿಂತ ಹೆಚ್ಚಿನ ಕ್ಯೂಸೆಕ್ಸ್ ನೀರು ಬಿಡುವ ಸಂಭವವಿದೆ.
ಆದ್ದರಿಂದ ನದಿ ಪಾತ್ರಗಳ ಜನರು ಯಾವುದೇ ಕಾರಣಕ್ಕೆ ನದಿಯ ಬಳಿ ತೆರಳದಂತೆ ಮತ್ತು ತಮ್ಮ ಜಾನುವಾರುಗಳನ್ನು ನದಿಗೆ ಕೊಂಡೊಯ್ಯದಂತೆ ಮುಂಜಾಗ್ರತೆವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ವಿಶೇಷ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಶಾಲಾ-ಕಾಲೇಜುಗಳಿಗೆ ರಜೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಉಳಿದಂತೆ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿವೆ.
ಭಾರೀ ಮಳೆಯ ಮುನ್ಸೂಚನೆಯ ಕಾರಣ ಸೋಮವಾರ ಮುಂಡಗೋಡ, ಹಳಿಯಾಳ ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ, ಜೋರಾದ ಗಾಳಿ ಮತ್ತು ಆಗಾಗ ತುಂತುರು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕದ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.
ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ.ದರ್ಶನ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದ್ದು ತುಂಗಾ ಸೇರಿದಂತೆ ವಿವಿಧ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಧಾರಾಕಾರ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಸೋಮವಾರ ರಜೆ. ಘೋಷಿಸಲಾಗಿದೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ಶಾಲೆಗಳಿಗೆ ರಜೆ. ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಇದೆ.
ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಮಂಗಳವಾರ ಮಳೆ ನೋಡಿಕೊಂಡು ರಜೆಯ ಕುರಿತು ತೀರ್ಮಾನ ಮಾಡಲಾಗುತ್ತದೆ.