Home Advertisement
Home ನಮ್ಮ ಜಿಲ್ಲೆ ಕಲಬುರಗಿ ಆಡಳಿತ ಪಕ್ಷದಲ್ಲಿನ ಆಂತರಿಕ ಕಚ್ಚಾಟ ಕ್ಲೈಮ್ಯಾಕ್ಸ್ ಹಂತಕ್ಕೆ

ಆಡಳಿತ ಪಕ್ಷದಲ್ಲಿನ ಆಂತರಿಕ ಕಚ್ಚಾಟ ಕ್ಲೈಮ್ಯಾಕ್ಸ್ ಹಂತಕ್ಕೆ

0
77

ಸಂ.ಕ. ಸಮಾಚಾರ ಕಲಬುರಗಿ : ಕಲಬುರಗಿ (Kalaburagi)ಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದರು.

ಕಳೆದ ಆರು ತಿಂಗಳಿನಿಂದ ಆಡಳಿತ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳು ಹೆಚ್ಚುತ್ತಿದ್ದು, ಇದೀಗ ಅವು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿವೆ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕುರಿತು ಮಾತನಾಡಿದ ಅವರು, ಆಡಳಿತ ಪಕ್ಷದಲ್ಲೇ ಬಜೆಟ್ ಬಗ್ಗೆ ವಿರೋಧಭಾಸ ಕಂಡುಬರುತ್ತಿದ್ದು, ಜನರು ಹೆಚ್ಚಿನ ನಿರೀಕ್ಷೆ ಇಟ್ಟಿದ್ದ ಬಜೆಟ್ ನಿರಾಶೆ ಮೂಡಿಸಿದೆ ಎಂದರು. ಕಳೆದ ಎರಡುವರೆ ವರ್ಷಗಳಿಂದ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಅವರು ಟೀಕಿಸಿದರು.

ಈ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ, ದೂರದೃಷ್ಟಿಯಿಲ್ಲದ ಬಜೆಟ್ ಆಗಿದೆ ಎಂದು ಹೇಳಿದ ವಿಜಯೇಂದ್ರ, ಹಿಂದುಳಿದ ಭಾಗಗಳ ಅಭಿವೃದ್ಧಿ ಕಡೆಗಣನೆಯಾಗಿದೆ ಎಂದು ಆರೋಪಿಸಿದರು. ಪ್ರಾದೇಶಿಕ ಅಸಮತೋಲನ ಹೆಚ್ಚುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು.

ಇದೇ ವೇಳೆ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು ತಮ್ಮ ಕ್ಷೇತ್ರವಾದ ಕಲಬುರಗಿಯ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಹಿಂದಿನ ಮುಖ್ಯಮಂತ್ರಿ B. S. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಕಲಬುರಗಿ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕಿದರು.

ಉಪಚುನಾವಣೆಯ ಬಗ್ಗೆ ಮಾತನಾಡಿದ ವಿಜಯೇಂದ್ರ, ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.