ಸಂ.ಕ. ಸಮಾಚಾರ ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದು, ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಬಂದರೂ ರಾಜ್ಯದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕಿಂತ ಹೆಚ್ಚು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಯುವಕರ ಭವಿಷ್ಯದೊಂದಿಗೆ ಸರ್ಕಾರ ಆಟವಾಡುತ್ತಿದೆ ಎಂದು ಕಿಡಿಕಾರಿದರು.
ಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ಹೊಂದಿಲ್ಲ. ಗೊಂದಲದ ನಿರ್ಧಾರಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಲ್ಲಿ ಅನಿಶ್ಚಿತತೆ ಉಂಟಾಗಿದೆ ಎಂದು ಹೇಳಿದರು. ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನರು ಬೇಸತ್ತಿದ್ದಾರೆ ಎಂದು ಆರೋಪಿಸಿದರು.
ಹಿಜಾಬ್ ಆದೇಶದ ವಿರುದ್ಧ ಆಕ್ರೋಶ : ಶಾಲೆ ಹಾಗೂ ಕಾಲೇಜುಗಳ ಸಮವಸ್ತ್ರ ನೀತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಹಿಜಾಬ್ ಕುರಿತ ಆದೇಶವನ್ನು ವಿಜಯೇಂದ್ರ ಟೀಕಿಸಿದರು. ಈ ರೀತಿಯ ನಿರ್ಧಾರಗಳು ವಿದ್ಯಾರ್ಥಿಗಳ ನಡುವೆ ಧರ್ಮಾಧಾರಿತ ಭಿನ್ನಾಭಿಪ್ರಾಯ ಮತ್ತು ದ್ವೇಷದ ವಾತಾವರಣ ಸೃಷ್ಟಿಸುವ ಅಪಾಯವಿದೆ ಎಂದು ಹೇಳಿದರು.
ಅಧಿಕಾರದ ಮದದಿಂದ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ ಕಾಪಾಡುವ ಬದಲು ವಿಭಜನೆಯ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ರಾಘವ ಚೈತನ್ಯ ಮಂದಿರ ಪ್ರಕರಣ ಹಿಂಪಡೆಯುವಿಕೆ ಖಂಡನೆ : ಆಳಂದ ತಾಲ್ಲೂಕಿನ ರಾಘವ ಚೈತನ್ಯ ಮಂದಿರಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿಜಯೇಂದ್ರ ತೀವ್ರವಾಗಿ ಖಂಡಿಸಿದರು. ಇದು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ಹೇಳಿದರು.
ಈ ವಿಚಾರವಾಗಿ ಬಿಜೆಪಿ ಕಲಬುರಗಿಯಲ್ಲಿ ಸಾಂಕೇತಿಕ ಪ್ರತಿಭಟನೆ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.
ಅಪಪ್ರಚಾರಕ್ಕೆ ತಿರುಗೇಟು : ತಮ್ಮ ವಿರುದ್ಧ ನಡೆಯುತ್ತಿರುವ ಆರೋಪಗಳು ಮತ್ತು ಅಪಪ್ರಚಾರಗಳ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, “ನಾನು ಯಾರೊಂದಿಗೂ ಯಾವುದೇ ವ್ಯವಹಾರ ಇಟ್ಟುಕೊಂಡಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಮೌನ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಎಲ್ಲವನ್ನೂ ಕಾದು ನೋಡೋಣ” ಎಂದು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದರು. ಇದರಿಂದ ರಾಜ್ಯ ಬಿಜೆಪಿ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚಿದೆ.






















