ಇಮೇಲ್ ಮೂಲಕ ಹುಸಿ ಬಾಂಬ್ ಸಂದೇಶ, ತೀವ್ರ ತಪಾಸಣೆ
ಸಂ.ಕ.ಸಮಾಚಾರ ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರನ್ನು ಸುರಕ್ಷಿತವಾಗಿ ಕೋರ್ಟ್ ಆವರಣದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ.
ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್‌ಗೆ ಬಂದ ಸಂದೇಶದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿತ್ತು. ವಿಷಯ ತಿಳಿದ ತಕ್ಷಣ ನ್ಯಾಯಾಲಯ ಆಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಕೋರ್ಟ್‌ಗಳ ಕಾರ್ಯವನ್ನು ಸ್ಥಗಿತಗೊಳಿಸಿತು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 59 ಲಕ್ಷ ಮೌಲ್ಯದ 24 ಕೆ.ಜಿ. ಬೆಳ್ಳಿ ಆಭರಣ ಕಳವು
ತೀವ್ರ ತಪಾಸಣೆ : ಸ್ಥಳಕ್ಕೆ ನಗರ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ದೌಡಾಯಿಸಿ ನ್ಯಾಯಾಲಯ ಆವರಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಪ್ರತಿ ಕೊಠಡಿ, ದಾಖಲೆ ವಿಭಾಗ ಮತ್ತು ವಾಹನ ನಿಲ್ದಾಣ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಳ್ಳಲಾಗಿದೆ.
ಪೊಲೀಸರು ನಡೆಸಿದ ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇದರಿಂದ ಬೆದರಿಕೆ ಹುಸಿಯಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಆದರೆ ಎಚ್ಚರಿಕೆಯ ಕ್ರಮವಾಗಿ ಸಂಪೂರ್ಣ ಕಟ್ಟಡವನ್ನು ಮರು ಪರಿಶೀಲನೆಗೊಳಪಡಿಸಲಾಗುತ್ತಿದೆ.
ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಗೆಳೆಯರ ಜಗಳ ಕೊಲೆಯಲ್ಲಿ ಅಂತ್ಯ
ಇಮೇಲ್ ಕಳುಹಿಸಿದ ಅನಾಮಿಕ ವ್ಯಕ್ತಿಯ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗ ಕಾರ್ಯಾಚರಣೆ ಆರಂಭಿಸಿದ್ದು, ಐಪಿ ವಿಳಾಸ ಸೇರಿದಂತೆ ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಘಟನೆಯಿಂದ ಕೆಲಕಾಲ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.













