ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯಬೇಕಾಗಿದ್ದ ಆರ್‌ಎಸ್‌ಎಸ್ ಪಥಸಂಚಲನ ಕುರಿತಂತೆ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ವಿಫಲವಾದ ಹಿನ್ನೆಲೆ, ಇಂದು ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಶಾಂತಿ ಸಭೆಯನ್ನು ಮತ್ತೊಮ್ಮೆ ನವೆಂಬರ್ 5ರಂದು ಬೆಂಗಳೂರಿನಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ವಾದ-ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು, ಪಥಸಂಚಲನದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಮತ್ತೊಮ್ಮೆ ಶಾಂತಿ ಸಭೆ ನಡೆಸುವಂತೆ ಸೂಚನೆ ನೀಡಿದರು.
ನವೆಂಬರ್ 2ರಂದು ನಡೆಯಬೇಕಿದ್ದ ಆರ್‌ಎಸ್‌ಎಸ್ ಪಥಸಂಚಲನ ಬಹುತೇಕ ಮುಂದೂಡಿಕೆಯಾದಂತಾಗಿದೆ. ನ.5ರಂದು ಸಂಜೆ 5 ಗಂಟೆಗೆ ಎಜಿ ಅವರ ಕಚೇರಿಯಲ್ಲಿ ನಡೆಯಲಿರುವ ಸಮಾಲೋಚನಾ ಸಭೆಯಲ್ಲಿ ಎಲ್ಲ ಪಕ್ಷಕಾರರು, ಪ್ರತಿವಾದಿಗಳು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಪಾಲ್ಗೊಳ್ಳಲಿದ್ದಾರೆ. ನ.7ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿದ್ದುದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಜಿಲ್ಲಾಡಳಿತ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವುದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿ, ಹೊಸ ಸಭೆಯನ್ನು ನವೆಂಬರ್ 5ರಂದು ಬೆಂಗಳೂರಿನಲ್ಲಿ ನಡೆಸುವಂತೆ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ನಡೆಯಬೇಕಿದ್ದ ಪಥಸಂಚಲನ ಮುಂದೂಡಿಕೆಯಾದಂತಾಗಿದೆ.
