ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವ 2025ರ ದಿನಾಂಕ ಘೋಷಣೆಯಾಗಿದೆ. ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ.
ಪವಿತ್ರ ತೀರ್ಥೋದ್ಭವ ಈ ಬಾರಿ ಅಕ್ಟೋಬರ್ 17ರಂದು ಮಧ್ಯಾಹ್ನ 1.44ರ ಮಕರ ಲಗ್ನದಲ್ಲಿ ನಡೆಯಲಿದೆ. ಹೆಚ್ಚಿನ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಲಾಗಿದೆ.
ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.
ಭಕ್ತರಿಗೆ ಅಗತ್ಯ ವ್ಯವಸ್ಥೆ: ಕೊಡಗು ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಶುಚಿತ್ವಕ್ಕೆ ಒತ್ತು ನೀಡಬೇಕು. ಕುಡಿಯುವ ನೀರು ಪೂರೈಸಬೇಕು. ಭಕ್ತಾಧಿಗಳಿಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಕೆಲಸವನ್ನು ಚಾಚು ತಪ್ಪದೇ ನಿರ್ವಹಿಸುವಂತೆ ಸೂಚಿಸಲಾಗಿದೆ.
ಸೆಪ್ಟೆಂಬರ್ 26ರಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುತ್ತದೆ. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಯಿಂದ ಸ್ವಚ್ಛತೆಗೆ ಒತ್ತು ನೀಡಲಾಗುವುದು. ಈ ಸಂಬಂಧ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು” ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, “ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಅಗತ್ಯ ಪೊಲೀಸರನ್ನು ನಿಯೋಜಿಸಲಾಗುವುದು” ಎಂದರು.
ವಾಹನಗಳ ನಿಲುಗಡೆಗೆ ವ್ಯವಸ್ಥೆ, ಸಂಚಾರ ದಟ್ಟಣೆ ನಿಯಂತ್ರಣ ಮಾಡುವುದು. ಭಕ್ತಾಧಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಲಾಗುವುದು. ಕಳೆದ ಬಾರಿ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಈ ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, “ಈ ಬಾರಿ ಪವಿತ್ರ ತೀರ್ಥೋದ್ಭವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಭಾಗಮಂಡಲ-ತಲಕಾವೇರಿ, ತಲಕಾವೇರಿ-ಭಾಗಮಂಡಲ ಮಾರ್ಗದಲ್ಲಿ 25ಕ್ಕೂ ಹೆಚ್ಚು ಬಸ್ಸು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ತೀರ್ಥೋದ್ಭವದಂದು ಉಚಿತ ಪ್ರಯಾಣಕ್ಕೆ ಅವಕಾಶ ಇದೆ” ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಪವಿತ್ರ ತೀರ್ಥೋದ್ಭಕ್ಕೆ ಅಗತ್ಯ ವೈದ್ಯರು ಮತ್ತು ಶುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೇವೆ ಹಾಗೂ ವೀಲ್‍ಚೇರ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆ ನಿಟ್ಟಿನಲ್ಲಿ ಒಂದು ದಿನದ ಮಟ್ಟಿಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಹೇಳಿದರು.