Home ನಮ್ಮ ಜಿಲ್ಲೆ ಕೊಡಗು ಕೊಡಗು: ವಿರಾಜಪೇಟೆ, ಕುಶಾಲನಗರ ಆಸ್ಪತ್ರೆ ಕುರಿತು ಅಪ್‌ಡೇಟ್

ಕೊಡಗು: ವಿರಾಜಪೇಟೆ, ಕುಶಾಲನಗರ ಆಸ್ಪತ್ರೆ ಕುರಿತು ಅಪ್‌ಡೇಟ್

0

“ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೊಡಗು ಜಿಲ್ಲೆ ವಿರಾಜಪೇಟೆ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಮಾತನಾಡಿದ ಅವರು, ” ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು” ಎಂದರು.

“ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

“ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಸಚಿವರು ಹೇಳಿದರು.

“ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು” ಎಂದು ಸಚಿವರು ಘೋಷಣೆ ಮಾಡಿದರು.

“ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ: “ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಮಾತನಾಡಿದ ಸಚಿವರು, “ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ” ಎಂದರು.

“ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

“ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ” ಎಂದು ಕರೆ ನೀಡಿದರು.

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, “ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

“ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು” ಎಂದು ಶಾಸಕರು ಭರವಸೆ ನೀಡಿದರು.

ಸಚಿವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು. ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version