ಕೋಲಾರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಗಾಗ ಕೈದಿಗಳಿಗೆ ರಾಜಾತಿಥ್ಯ ದೊರಕಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿರುವುದನ್ನು ಗಮನಿಸಿದರೆ ಇದು ರಾಜ್ಯದ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಇರಬಹುದು ಎಂಬ ಅನುಮಾನ ಮೂಡಿಸುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದರು.
ಮಂಗಳವಾರ ಕೋಲಾರ ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಅವರ ತಾಯಿ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಅವರ 75ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಯೋಜನೆ ಅಂತಾರೆ, ಕೈದಿಗಳ ಮೋಜು-ಮಸ್ತಿಗೆ ಕಾಂಗ್ರೆಸ್ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಗಟ್ಟಿಯಾಗಿ ಮುಂದುವರೆಯುತ್ತದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಗಟ್ಟಿಯಾಗಿ ನೆಲೆಯೂರುತ್ತದೆ ಎಂದು ತಿಳಿಸಿದರು.
ರಾಜ್ಯಕ್ಕೆ ಕುಮಾರಣ್ಣ ಅನಿವಾರ್ಯ. ಅವರ ನಾಯಕತ್ವವನ್ನು ಎಲ್ಲ ಜನರೂ ಒಪ್ಪಿದ್ದಾರೆ ಎಂದು ನಿಖಿಲ್ ಹೇಳಿದರು. ದೆಹಲಿ ಬಾಂಬ್ ಸ್ಫೋಟದಲ್ಲಿ ಯಾರೇ ಭಾಗಿಯಾಗಿದ್ದರೂ ತನಿಖೆ ಮೂಲಕ ಸತ್ಯವನ್ನು ಹೊರತಂದು ಕಠಿಣ ಶಿಕ್ಷೆಗೆ ವಿಧಿಸಬೇಕು. ಇದೊಂದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.
