SK Home Ad
Home ನಮ್ಮ ಜಿಲ್ಲೆ ಕೊಪ್ಪಳ ಬರಪೀಡಿತ ಪ್ರದೇಶ ಘೋಷಣೆ: ಕುಷ್ಟಗಿಯಲ್ಲಿ 16 ರಂದು‌ ವಿನೂತನ ಪ್ರತಿಭಟನೆ

ಬರಪೀಡಿತ ಪ್ರದೇಶ ಘೋಷಣೆ: ಕುಷ್ಟಗಿಯಲ್ಲಿ 16 ರಂದು‌ ವಿನೂತನ ಪ್ರತಿಭಟನೆ

0
22

ಕೊಪ್ಪಳ: ಕುಷ್ಟಗಿ ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಸೆ. 16ರಂದು ಪಟ್ಟಣದಲ್ಲಿ ಪಕ್ಷಾತೀತವಾಗಿ ವಿನೂತನ ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಗೆ ತಾಲೂಕಿನ 170ಕ್ಕೂ ಅಧಿಕ ಗ್ರಾಮಗಳಿಂದ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಮಲ್ಲಯ್ಯ ಸರ್ಕಲ್‌ನಿಂದ ಬಸವೇಶ್ವರ ಸರ್ಕಲ್‌ವರೆಗೆ ಬೃಹತ್ ಮೆರವಣಿಗೆ ನಡೆಸಲಾಗುವುದು. ಮಾರ್ಗಮಧ್ಯೆ ಬರುವ ವಿವಿಧ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ, ಅಧಿಕಾರಿಗಳನ್ನು ಹೊರಗೆ ಕಳುಹಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುವುದು ಎಂದರು.

ಬಸವೇಶ್ವರ ಸರ್ಕಲ್ ಹಾಗೂ ಮಾರುತಿ ವೃತ್ತದಲ್ಲಿ ಸುಮಾರು ಒಂದೂವರೆಯಿಂದ ಎರಡು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ತಾಲೂಕಿನ ಪ್ರತಿಯೊಂದು ಗ್ರಾಮದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮತ್ತು ಸಾರ್ವಜನಿಕರು ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಹಾನಿಗೀಡಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯಲ್ಲಿ ಕುಷ್ಟಗಿ ತಾಲೂಕು ಸೇರ್ಪಡೆಯಾಗಿಲ್ಲ. ಕೂಡಲೇ ಕುಷ್ಟಗಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಅರ್ಹ ರೈತರ ಖಾತೆಗಳಿಗೆ ಪರಿಹಾರಧನ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ನೀಡಿರುವ ಭರವಸೆ ಈಡೇರದಿದ್ದರೆ ಬರಪೀಡಿತ ತಾಲೂಕು ಘೋಷಣೆಯಾಗುವವರೆಗೆ ಹೋರಾಟ ಮುಂದುವರಿಸಲಾಗುವುದು. ಈ ಹೋರಾಟಕ್ಕೆ ಯಾವುದೇ ಪಕ್ಷದ ಭೇದವಿಲ್ಲದೆ ಎಲ್ಲರೂ ಕೈಜೋಡಿಸಬೇಕು. ರೈತರ ಹಿತದೃಷ್ಟಿಯಿಂದ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ದೊಡ್ಡನಗೌಡ ಪಾಟೀಲ್ ಎಚ್ಚರಿಸಿದರು.