Home ನಮ್ಮ ಜಿಲ್ಲೆ ಕೊಪ್ಪಳ ಕೊಪ್ಪಳ : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವು

ಕೊಪ್ಪಳ : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವು

0

ಕೊಪ್ಪಳ: ಕೊಪ್ಪಳ‌ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಘಟನೆ ನಡೆದಿದ್ದು ಭೀಕರ ಅಪಘಾತದಲ್ಲಿ ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19) ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರು ಎನ್ನಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯು ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದರು. ಘಟನೆಯಲ್ಲಿ ನಾಲ್ವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಬೈಕ್ ಡಿಕ್ಕಿ: ಕುಕನೂರು ತಾಲ್ಲೂಕಿನ ಭಾನಾಪುರದ ಬಳಿ ಪಾದಯಾತ್ರೆ ಹೊರಟಿದ್ದ ಕುಕನೂರಿನ ವೀರೇಶ ಹಳ್ಳಿಕೇರಿ (28) ಎಂಬ ಯುವಕನಿಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಪಾದಯಾತ್ರೆ ಹೊರಟ ತಂಡದಲ್ಲಿ ಒಟ್ಟು ಒಂಬತ್ತು ಜನ ಪಾದಯಾತ್ರೆಗೆ ಹೊರಟಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version