SK Home Ad
Home ನಮ್ಮ ಜಿಲ್ಲೆ ಕೊಪ್ಪಳ ಹಿಟ್ನಾಳಗೆ ತಪ್ಪಿದ ಸಚಿವ ಸ್ಥಾನ: ಕೊಪ್ಪಳದಲ್ಲಿ ಟೈರ್ ಸುಟ್ಟು ಬೆಂಬಲಿಗರ ಪ್ರತಿಭಟನೆ!

ಹಿಟ್ನಾಳಗೆ ತಪ್ಪಿದ ಸಚಿವ ಸ್ಥಾನ: ಕೊಪ್ಪಳದಲ್ಲಿ ಟೈರ್ ಸುಟ್ಟು ಬೆಂಬಲಿಗರ ಪ್ರತಿಭಟನೆ!

0
81

ಕೊಪ್ಪಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೊಪ್ಪಳದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದ ಅಶೋಕ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಸಚಿವ ಸಂಪುಟದ ಹೊಸ ಪಟ್ಟಿಯಲ್ಲಿ ರಾಘವೇಂದ್ರ ಹಿಟ್ನಾಳ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೆಲಕಾಲ ಪ್ರತಿಭಟನೆಯಿಂದ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು, ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡದಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಬೆಂಬಲಿಗರು, ರಾಘವೇಂದ್ರ ಹಿಟ್ನಾಳ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಇಂತಹ ಹಿರಿಯ ಶಾಸಕರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಜಿಲ್ಲೆಯ ಜನತೆಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಹಲವು ಜಿಲ್ಲೆಗಳಲ್ಲಿ ಅಸಮಾಧಾನದ ಧ್ವನಿಗಳು ಕೇಳಿಬರುತ್ತಿದ್ದು, ಕೊಪ್ಪಳದಲ್ಲಿಯೂ ಅದರ ಪ್ರತಿಫಲವಾಗಿ ಪ್ರತಿಭಟನೆ ನಡೆದಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಅಸಮಾಧಾನವನ್ನು ಹೇಗೆ ನಿಭಾಯಿಸುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.