ಕಾರಟಗಿ: ವಿರೋಧ ಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಡುತ್ತಿರುವ ನಾಟಕ. ಅದನ್ನು ಪಾದಯಾತ್ರೆ ಎನ್ನುವುದಕ್ಕಿಂತ `ಪಶ್ಚಾತ್ತಾಪದ ಯಾತ್ರೆ’ ಎಂದು ಕರೆಯುವುದು ಸೂಕ್ತ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.
ಕಾರಟಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೆಪಿಎಸ್‌ಸಿ ಹಾಗೂ ಪಿಎಸ್‌ಐ ನೇಮಕಾತಿ ಅಕ್ರಮಗಳು ಅವರ ಆಡಳಿತದ ಕರ್ಮಕಾಂಡಕ್ಕೆ ಸಾಕ್ಷಿಯಾಗಿವೆ. ಇಂತಹ ಹಗರಣಗಳ ಹಿನ್ನೆಲೆ ಹೊಂದಿರುವವರಿಗೆ ಪ್ರಸ್ತುತ ಸರ್ಕಾರವನ್ನು ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಹಣ ಮರುಪಡೆಯುವ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ. ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವರಾಗಿದ್ದ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.






















