ದಕ್ಷಿಣ ಕನ್ನಡ : ಕರ್ನಾಟಕದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇನ್ಮುಂದೆ ಗುಣಮಟ್ಟದ ಕ್ಯಾನ್ಸರ್ ಆರೈಕೆ ಲಭ್ಯವಾಗಲಿದೆ.
ಈ ಕುರಿತು ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ 1.49 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ-ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಆರೈಕೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2025-26ರ ಬಜೆಟ್‌ನಲ್ಲಿ ಮುಂದಿನ 3 ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಘೋಷಣೆ ಮಾಡಿತ್ತು.
ಈ ಘೋಷಣೆಯ ಭಾಗವಾಗಿ ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ.
ತಗ್ಗಲಿದೆ ಚಿಕಿತ್ಸೆಯ ಹೊರೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲಾಗುತ್ತದೆ. ಜನರಿಗೆ ಗುಣಮಟ್ಟದ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆ ಕಡಿಮೆ ಮಾಡುವುದು ಯೋಜನೆಯ ಉದ್ದೇಶ. ಪ್ರಸ್ತಾವಿತ ಕೇಂದ್ರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ಥಾಪನೆಯಾಗಲಿದೆ.
ಕ್ಯಾನ್ಸರ್ ರೋಗನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸರ್ ತಡೆಗಟ್ಟುವಿಕೆ ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜೊತೆಗೆ ಇತರ ಸೇವೆಗಳನ್ನು ಕೇಂದ್ರ ಒದಗಿಸಲಿದೆ. ಕೇಂದ್ರ ಸರ್ಕಾರದ ಕೊಡುಗೆಯನ್ನು ಸಂಸದರು ಸ್ವಾಗತಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾಗೆ ಜಿಲ್ಲೆಯ ಜನರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಮಂಗಳೂರು ನಗರದಲ್ಲಿನ ಡೇ ಕೇರ್ ಸೆಂಟರ್‌ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಆರೈಕೆಯನ್ನು ಸ್ಥಳೀಯವಾಗಿಯೇ ಒದಗಿಸುವುದರಿಂದ ರೋಗಿಗಳು ದೂರದ ನಗರಗಳಿಗೆ ಪ್ರಯಾಣಿಸುವ ತೊಂದರೆ ತಪ್ಪುತ್ತದೆ. ಕ್ಯಾನ್ಸರ್ ರೋಗಿಗಳ ಚಿಕಿತ್ಸಾ ವೆಚ್ಚ ಮತ್ತು ಸಮಯವನ್ನು ಉಳಿತಾಯವಾಗಲಿದೆ. ಚೇತರಿಕೆಗೆ ಅಗತ್ಯವಾದ ಮಾನಸಿಕ ನೆಮ್ಮದಿಯನ್ನೂ ನೀಡುತ್ತದೆ. ಇದು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.