ಮೈಸೂರು: ನಗರದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರವೂ ಮುಂದುವರಿದಿದ್ದು, ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಸರ್ಕಾರಿ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ಜಾಗದ ಅಂದಾಜು ಮೌಲ್ಯ ಸುಮಾರು ₹140 ಕೋಟಿ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಕಟ್ಟಡಗಳು ಹಾಗೂ ತಾತ್ಕಾಲಿಕ ನಿರ್ಮಾಣಗಳನ್ನು ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಆಯುಕ್ತ ರಕ್ಷಿತ್ ಅವರ ನೇತೃತ್ವದಲ್ಲಿ, ಪೊಲೀಸ್ ಭದ್ರತೆಯೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ: ಅಪಘಾತ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು
ಕಾರ್ಯಾಚರಣೆ ವೇಳೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳು, ವಾಸಸ್ಥಾನಗಳು ಹಾಗೂ ಇತರೆ ತಾತ್ಕಾಲಿಕ ಕಟ್ಟಡಗಳನ್ನು ಜೆಸಿಬಿ ಸೇರಿದಂತೆ ಯಂತ್ರೋಪಕರಣಗಳ ಸಹಾಯದಿಂದ ತೆರವುಗೊಳಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಅಧಿಕಾರಿಗಳು ಸಂಪೂರ್ಣ ಪ್ರದೇಶವನ್ನು ಖಾಲಿ ಮಾಡಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಶಕ್ಕೆ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಜಾಗವನ್ನು ನಗರಾಭಿವೃದ್ಧಿ ಯೋಜನೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಉಡುಪಿ: ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ
ನಗರದಲ್ಲಿ ಹೆಚ್ಚುತ್ತಿರುವ ಅತಿಕ್ರಮಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಮುಂದುವರೆದ ಕ್ರಮಗಳನ್ನು ಕೈಗೊಂಡಿದ್ದು, ಅಕ್ರಮ ಒತ್ತುವರಿಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಕಾರ್ಯಾಚರಣೆಯಿಂದ ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವಲ್ಲಿ ಸರ್ಕಾರದ ಬದ್ಧತೆ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.





















