ಸಂ.ಕ. ಸಮಾಚಾರ ನಂಜನಗೂಡು (ಮೈಸೂರು): ದ್ವಿಚಕ್ರ ವಾಹನ ಹಾಗೂ ಗೊಬ್ಬರ ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ನಡೆದಿದೆ. ಮೈಸೂರಿನ ಜೆಪಿ ನಗರದ ನಿವಾಸಿ ಚಂದ್ರು (38) ಹಾಗೂ ನಡುಕಲು ಮೊಳೆ ಗ್ರಾಮದ ಶೀಲಾ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಚಂದ್ರು ಮತ್ತು ಶೀಲಾ ಅವರು ಸ್ಕೂಟರ್‌ನಲ್ಲಿ ಸಂತೇಮರಹಳ್ಳಿ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ವಿರುದ್ಧ ದಿಕ್ಕಿನಿಂದ ಚುಂಚನಹಳ್ಳಿ ಕಡೆಗೆ ಸಾಗುತ್ತಿದ್ದ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು, ಲಾರಿ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಉಡುಪಿ: ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ
ಅಪಘಾತದ ದೃಶ್ಯ ಅತ್ಯಂತ ಭೀಕರವಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾದರು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ರಘು, ಸಿಪಿಐ ಚಂದ್ರಶೇಖರ್, ಕವಲಂದೆ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜು, ಎಸ್.ಬಿ. ರಮೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸರು ಸ್ಥಳದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆ ಮಾಜಿ ಶಾಸಕ ಮೋತಿ ವೀರಣ್ಣ ನಿಧನ
ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ. ಈ ದುರ್ಘಟನೆಯಿಂದ ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.





















