ಹಾಸನ: ಮಾಜಿ ಸಂಸದ, ಜೆಡಿಎಸ್ ನಾಯಕ ಪಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ. 2024ರ ಮೇ ತಿಂಗಳಿನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು.
ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶನಿವಾರ ಅರ್ಜಿಯ ತೀರ್ಪು ಪ್ರಕಟಿಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ಸೂಚನೆಯಂತೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ 2ನೇ ಬಾರಿಗೆ ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು. ಆದರೆ ಕೋರ್ಟ್ ಅರ್ಜಿ ವಜಾಗೊಳಿಸಿದ್ದು, ಜೈಲಿನಲ್ಲಿಯೇ ಪ್ರಜ್ವಲ್ ಉಳಿಯುವಂತಾಗಿದೆ.
ಯಾವ ಕೋರ್ಟ್‌ನಲ್ಲಿಯೂ ಜಾಮೀನು ಇಲ್ಲ: ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ ಜನಪ್ರತಿನಿಧಿಗಳ ಕೋರ್ಟ್, ಕರ್ನಾಟಕ ಹೈಕೋರ್ಟ್, ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿಗಳು ವಜಾಗೊಂಡಿದ್ದವು.
ಆದ್ದರಿಂದ ಅವರು ಮತ್ತೊಮ್ಮೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೂನ್‌ನಲ್ಲಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಜನಪ್ರತಿನಿಧಿಗಳ ಕೋರ್ಟ್‌ಗೆ 2ನೇ ಬಾರಿಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿತ್ತು.
ಈಗ ಜನಪ್ರತಿನಿಧಿಗಳ ಕೋರ್ಟ್ ಮತ್ತೆ ಜಾಮೀನು ಅರ್ಜಿ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಪುನಃ ಜಾಮೀನು ಪಡೆಯಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ.
ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂಬುದು ಆರೋಪವಾಗಿದೆ. 2024ರ ಲೋಕಸಭೆ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳ ಮೊದಲು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು.
ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ದೇಶವನ್ನು ಬಿಟ್ಟು ಪರಾರಿಯಾಗಿದ್ದರು. ಕರ್ನಾಟಕ ಸರ್ಕಾರ ಈ ಆರೋಪಗಳ ಕುರಿತು ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿತ್ತು. ವಿದೇಶದಿಂದ ಆಗಮಿಸಿದ್ದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿತ್ತು.
ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಪ್ರಜ್ವಲ್ ರೇವಣ್ಣ ಪರ ವಕೀಲರು ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಂದಗತಿಯಲ್ಲಿದೆ. ಆದ್ದರಿಂದ ಆರೋಪಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಆಗ ಹೈಕೋರ್ಟ್ ಜನಪ್ರತಿನಿಧಿಗಳ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಎಂದು ಸೂಚನೆ ನೀಡಿತ್ತು.
ಪ್ರಜ್ವಲ್ ರೇವಣ್ಣ ಜೈಲು ಸೇರಿ ಒಂದು ವರ್ಷದ ಮೇಲಾಗಿದೆ. ವಿವಿಧ ಕೋರ್ಟ್‌ಗಳಲ್ಲಿ ಜಾಮೀನು ಅರ್ಜಿ ತಿರಸ್ಕಾರವಾಗುತ್ತಲೇ ಇದೆ. ಆದ್ದರಿಂದ ಜೈಲಿನಲ್ಲಿಯೇ ಉಳಿಯುವಂತಾಗಿದೆ. ಪುತ್ರನ ಬಿಡುಗಡೆಗಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪ್ರಯತ್ನ ನಡೆಸುತ್ತಲೇ ಇದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಹಾಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದರು. ಮತದಾನಕ್ಕೆ ಕೆಲವೇ ದಿನ ಮೊದಲು ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ, ಅತ್ಯಾಚಾರ ನಡೆಸಿದ ವಿಡಿಯೋ ಬಹಿರಂಗವಾಗಿತ್ತು. ಚುನಾವಣೆಯಲ್ಲಿ ಪ್ರಜ್ವಲ್ 6,30,339 ಮತಗಳನ್ನು ಪಡೆದು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಹಾಸನ ಸಂಸದರಾಗಿ ಆಯ್ಕೆಯಾದರು.