SK Home Ad
Home ನಮ್ಮ ಜಿಲ್ಲೆ ರಾಯಚೂರು ಬಿಸಿಯೂಟ ಸೇವಿಸಿ 51 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ

ಬಿಸಿಯೂಟ ಸೇವಿಸಿ 51 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ

0
2

ರಾಯಚೂರು: ಬಿಸಿಯೂಟ ಸೇವಿಸಿದ 51 ವಿದ್ಯಾರ್ಥಿಗಳು ಹಾಗೂ ಇಬ್ಬರು ಅತಿಥಿ ಶಿಕ್ಷಕರು ಸೇರಿದಂತೆ ಸುಮಾರು 53 ಜನರು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಬಿಸಿಯೂಟವಾಗಿ ಚಿತ್ರಾನ್ನ ಸಿದ್ಧಪಡಿಸಲಾಗಿತ್ತು. ಚಿತ್ರಾನ್ನ ಸೇವಿಸಿದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ತಲೆಸುತ್ತು, ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ.

ಕೂಡಲೇ ಎಚ್ಚೆತ್ತುಕೊಂಡ ಶಾಲಾ ಸಿಬ್ಬಂದಿ ಮತ್ತು ಗ್ರಾಮಸ್ಥರು ಎಲ್ಲಾ ಮಕ್ಕಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಸದ್ಯ ಎಲ್ಲ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಕೆಲ ಮಕ್ಕಳ ಸ್ಥಿತಿ ಗಂಭೀರವಾಗಿದ್ದರೂ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪಾಲಕರ ಆಕ್ರೋಶ: ಶಾಲೆಯಲ್ಲಿ ಬಿಸಿಯೂಟ ತಯಾರಿಕೆಯಲ್ಲಿ ಕಲುಷಿತಗೊಂಡ ನೀರನ್ನು ಬಳಸಿ ಚಿತ್ರಾನ್ನ ತಯಾರಿಸಲಾಗಿದೆ ಎಂಬ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಬಿಸಿಯೂಟ ಉಸ್ತುವಾರಿ ನೋಡಿಕೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿರುವುದೇ ಇಂಥ ಘಟನೆಗೆ ಕಾರಣವಾಗಿದೆ ಎಂದು ಪಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಆದರೆ ಮೇಲ್ನೋಟಕ್ಕೆ ಇದು ಆಹಾರ ವಿಷ ಹಾಗೂ ಕಲುಷಿತ ನೀರು ಬಳಕೆ ಪ್ರಕರಣ ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.