SK Home Ad
Home ನಮ್ಮ ಜಿಲ್ಲೆ ರಾಯಚೂರು ದಲಿತ ಮುಖಂಡನ ಬರ್ಬರ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

ದಲಿತ ಮುಖಂಡನ ಬರ್ಬರ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

0
112

ದೇವದುರ್ಗ (ರಾಯಚೂರು): ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಸಮೀಪ ದಲಿತ ಮುಖಂಡನೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಗಬ್ಬೂರು ಸಮೀಪದ ಹದ್ದಿನಾಳ ಗ್ರಾಮದ ನಿವಾಸಿ ಹಾಗೂ ಮಾದಿಗ ಸಮಾಜದ ಮುಖಂಡ ಭೂಮಾನಂದ (35) ಮೃತರು ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ದೇವದುರ್ಗ–ರಾಯಚೂರು ಮುಖ್ಯ ರಸ್ತೆಯಲ್ಲಿರುವ ಸುಂಕೇಶ್ವರಹಾಳ ಗ್ರಾಮದ ಹದ್ದಿನಾಳ ಕ್ರಾಸ್ ಸಮೀಪ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ದುಷ್ಕರ್ಮಿಗಳು ಭೂಮಾನಂದ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಹಳೆ ವೈಷಮ್ಯ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಬ್ಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರ ಬೆಳಗ್ಗೆ ದಲಿತ ಸಂಘಟನೆಗಳ ಮುಖಂಡರು ಹಾಗೂ ಸ್ಥಳೀಯರು ಕೊಲೆ ನಡೆದ ಸ್ಥಳದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಶೀಘ್ರ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಿಂದ ಕೆಲಕಾಲ ದೇವದುರ್ಗ–ರಾಯಚೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಆರೋಪಿಗಳ ಬಂಧನಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಈ ಪ್ರಕರಣವು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೊಲೆ ಹಿಂದಿರುವ ನಿಖರ ಕಾರಣ ಮತ್ತು ಆರೋಪಿಗಳ ಬಂಧನದತ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.