SK Home Ad
Home ನಮ್ಮ ಜಿಲ್ಲೆ ರಾಯಚೂರು ಸಾಹಿತ್ಯ ಸಮ್ಮೇಳನ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಜನಪ್ರತಿನಿಧಿಗಳು

ಸಾಹಿತ್ಯ ಸಮ್ಮೇಳನ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಜನಪ್ರತಿನಿಧಿಗಳು

0
68

ರಾಯಚೂರು: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸಂಭ್ರಮಕ್ಕೆ ರಾಯಚೂರು ಸಾಕ್ಷಿಯಾಯಿತು. ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಆವರಣದಲ್ಲಿ ಶನಿವಾರ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ಕನ್ನಡ ಧ್ವಜಾರೋಹಣ ಹಾಗೂ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆಯ ಮೂಲಕ ಅದ್ದೂರಿ ಚಾಲನೆ ನೀಡಲಾಯಿತು.

ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ನಗರದ ಮಹಿಳಾ ಸಮಾಜದಿಂದ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ರಾಮಣ್ಣ ಹವಳೆ ಅವರನ್ನು ಪುಷ್ಪಾಲಂಕೃತ ರಥದಲ್ಲಿ ಕೂರಿಸಿ ಭವ್ಯ ಮೆರವಣಿಗೆ ನಡೆಸಲಾಯಿತು. ಕನ್ನಡದ ಧ್ವಜಗಳು, ವಾದ್ಯಗಳ ನಾದ ಹಾಗೂ ಕನ್ನಡಾಭಿಮಾನಿಗಳ ಉತ್ಸಾಹ ಮೆರವಣಿಗೆಗೆ ಮೆರುಗು ನೀಡಿದವು.

ಮೆರವಣಿಗೆಯಲ್ಲಿ ಸಂಸದ ಜಿ. ಕುಮಾರ ನಾಯಕ, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸೇರಿದಂತೆ ಹಲವು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ವಾದ್ಯಗಳ ತಾಳಕ್ಕೆ ಹೆಜ್ಜೆ ಹಾಕಿದ ಜನಪ್ರತಿನಿಧಿಗಳು ಗಮನ ಸೆಳೆದರು. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ವೈಭವ ಸಾರುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಆರಂಭ ದೊರೆಯಿತು.